ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಕತ್ತಿ ತೋರಿಸಿ ಬೆದರಿಕೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
Update: 2023-05-16 12:57 IST
ಬಳ್ಳಾರಿ: ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಬಿ. ನಾಗೇಂದ್ರ ಅವರಿಗೆ ಕಿಡಿಗೇಡಿಗಳಿಬ್ಬರು ಕತ್ತಿ ತೋರಿಸಿ ಬೆದರಿಕೆ ಹಾಕಿದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದೇವಿನಗರದ ವಿಷ್ಣು ವೆಂಕಟೇಶ್ ಮತ್ತು ರಮೇಶ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದ ಶನಿವಾರ ರಾತ್ರಿ 8 ಗಂಟೆಯ ಸಮಯದಲ್ಲಿ ಶಾಸಕ ನಾಗೇಂದ್ರ ಆಪ್ತರೊಬ್ಬರ ಮನೆಗೆ ಹೋಗಿ ವಾಪಸ್ ಬರುವ ಸಂದರ್ಭ ರಸ್ತೆ ಬದಿಯಲ್ಲಿದ್ದ ಇಬ್ಬರು ಕೈಯಲ್ಲಿದ್ದ ಕತ್ತಿ ಝಳಪಿಸಿ ಬೆದರಿಕೆ ಹಾಕಿದ್ದಾರೆನ್ನಲಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಶಾಸಕರಾಗಲೀ ಅಥವಾ ಅವರ ಬೆಂಬಲಿಗರಾಗಲೀ ಘಟನೆ ಕುರಿತು ದೂರು ನೀಡಿಲ್ಲ. ಆದರೆ, ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.