ಉನ್ನತ ಶಿಕ್ಷಣದಿಂದ ಬದುಕಿನ ಬಾಗಿಲುಗಳು ತೆರೆದುಕೊಳ್ಳುತ್ತವೆ: ರೊನಾಲ್ಡ್ ಪಿಂಟೊ
ಮಂಗಳೂರು: ವಿಜ್ಞಾನದಲ್ಲಿ ಉನ್ನತ ಶಿಕ್ಷಣ ಇಲ್ಲದೇ ಇದ್ದರೆ ಅವಕಾಶಗಳ ಕೊರತೆ ಉಂಟಾಗಬಹುದು. ವಿಜ್ಞಾನವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು, ಅದರ ಲಾಭ ಪಡೆಯಲು ಉನ್ನತ ಶಿಕ್ಷಣ ಅನಿವಾರ್ಯ ಎಂದು ಇನ್ಸ್ಟಿಟ್ಯೂಟ್ ಫಾರ್ ಇಂಡಿವ್ಯೆಶುವಲ್ ಡೆವೆಲಪ್ಮೆಂಟ್ ನ ನಿರ್ದೇಶಕ ಪ್ರೊ. ರೊನಾಲ್ಡ್ ಪಿಂಟೂ ಅಭಿಪ್ರಾಯಪಟ್ಟಿದ್ದಾರೆ.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರಸಾಯನಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ವತಿಯಿಂದ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಬಿ.ಎಸ್ಸಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶಗಳು ಎಂಬ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಅನಸೂಯ ರೈ, ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವುದು ವಿಜ್ಞಾನ ವಿಷಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚುತ್ತಿರುವುದನ್ನು ಸೂಚಿಸುತ್ತದೆ ಎಂದರು.
ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಸಂಯೋಜಕ ಡಾ. ಲಕ್ಷ್ಮಣ್ ಕೆ, ಐಕ್ಯೂಎಸಿ ಸಂಯೋಜಕ ಡಾ. ಸಿದ್ದರಾಜು ಎಂ ಎನ್ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಕೆ. ಎಂ ಉಷಾ ಸ್ವಾಗತಿಸಿದರು. ಅಂತಿಮ ವರ್ಷದ ವಿಜ್ಞಾನ ವಿದ್ಯಾರ್ಥಿ ಮೆಲ್ರಿನ್ ನಿರೂಪಿಸಿದರು.