×
Ad

ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿ: ಕೆ.ಸಿ ವೇಣುಗೋಪಾಲ್ ಅಧಿಕೃತ ಘೋಷಣೆ

ಏಕೈಕ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್

Update: 2023-05-18 12:09 IST

ಬೆಂಗಳೂರು, ಮೇ 18: ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಕಸರತ್ತು ಕೊನೆಗೂ ಅಂತ್ಯಗೊಂಡಿದ್ದು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ.

ಗುರುವಾರ ಹೊಸದಿಲ್ಲಿಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಎಂದು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ‘ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಿದ್ದಾರೆ’ ಎಂದು ಪ್ರಕಟಿಸಿದರು.

‘ನೂತನ ಸರಕಾರದಲ್ಲಿ ಡಿ.ಕೆ.ಶಿವಕುಮಾರ್ ಒಬ್ಬರು ಮಾತ್ರ ಉಪ ಮುಖ್ಯಮಂತ್ರಿ ಆಗಲಿದ್ದಾರೆ. ಅಲ್ಲದೆ, ಮುಂದಿನ ಲೋಕಸಭಾ ಚುನಾವಣೆಯ ವರೆಗೆ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದೆ’ ಎಂದು ಕೆ.ಸಿ.ವೇಣುಗೋಪಾಲ್ ಹೇಳಿದರು.

‘ಮೇ 20ರಂದು ಮಧ್ಯಾಹ್ನ 12.30ಕ್ಕೆ ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯೊಂದಿಗೆ ಹಲವು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಸಮಾನ ಮನಸ್ಕ ಪಕ್ಷಗಳ ಮುಖಂಡರನ್ನು ಆಹ್ವಾನಿಸಲಾಗುವುದು ಎಂದು ಅವರು ತಿಳಿಸಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ನಾಯಕರು ರಾಜ್ಯವನ್ನು ಮುನ್ನಡೆಸಲು ಸಮರ್ಥರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಹಲವಾರು ಮಂದಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವ ಸಾಮಥ್ರ್ಯ ಇರುವವರು ಇದ್ದಾರೆ. ಆದರೆ, ಒಬ್ಬರಿಗೆ ಮಾತ್ರ ಮುಖ್ಯಮಂತ್ರಿ ಆಗಲು ಸಾಧ್ಯ. ಆದುದರಿಂದ, ಎಐಸಿಸಿ ಅಧ್ಯಕ್ಷರು ಸಿದ್ದರಾಮಯ್ಯರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದಾರೆ ಎಂದು ಅವರು ಹೇಳಿದರು.

ಈ ಚುನಾವಣೆಯು ಬಡವರು ಮತ್ತು ಶ್ರೀಮಂತರ ನಡುವಿನ ಸಮರವಾಗಿತ್ತು. ನಮ್ಮ ಪಕ್ಷ ಬಡವರು ಹಾಗೂ ಮಧ್ಯಮ ವರ್ಗದವರ ಪರವಾಗಿ ನಿಂತಿತ್ತು. ಈ ಗೆಲುವಿಗಾಗಿ ನಮ್ಮ ಪಕ್ಷದ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕ ಹಿರಿಯ ನಾಯಕರು ಶ್ರಮಿಸಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಎಂದು ವೇಣುಗೋಪಾಲ್ ಹೇಳಿದರು.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಲ್ಲಿ ನಡೆಸಿದ ಭಾರತ್ ಜೋಡೊ ಯಾತ್ರೆಯು ಕಾಂಗ್ರೆಸ್ ಗೆಲುವಿಗೆ ಮುನ್ನುಡಿ ಬರೆಯಿತು. ಪ್ರಿಯಾಂಕಾ ಗಾಂಧಿ ನಡೆಸಿದಂತಹ ಪ್ರಚಾರ ಸಭೆಗಳು, ರೋಡ್ ಶೋಗಳಿಗೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿತು ಎಂದು ವೇಣುಗೋಪಾಲ್ ಹೇಳಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, ‘ಸಿದ್ದರಾಮಯ್ಯ ಒಬ್ಬ ಅನುಭವಿ ರಾಜಕಾರಣಿ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಅವರು ಸಾಕಷ್ಟು ಶ್ರಮಪಟ್ಟಿದ್ದಾರೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಸಂಘಟಿಸಿ, ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆ’ ಎಂದು ನುಡಿದರು.

ಅಧಿಕಾರ ಹಂಚಿಕೆ ಇಲ್ಲ: ‘ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಅಧಿಕಾರ ಹಂಚಿಕೆ ಮಾಡಲಾಗಿಲ್ಲ. ಸಿದ್ದರಾಮಯ್ಯ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರುತ್ತಾರೆ. ಐದು ದಿನಗಳಿಂದ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆ ಸರಣಿ ಸಭೆಗಳನ್ನು ಮಾಡಿ, ಈ ನಿರ್ಧಾರಗಳನ್ನು ಬರಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಒಟ್ಟಿಗೆ ಸೇರಿ ರಾಜ್ಯಕ್ಕೆ ಉತ್ತಮ ಆಡಳಿತ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು. 

‘ಕಾಂಗ್ರೆಸ್ ತಂಡವು ರಾಜ್ಯದ ಜನತೆಯ ಪ್ರಗತಿ, ಕಲ್ಯಾಣ ಹಾಗೂ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. 6.5 ಕೋಟಿ ಕನ್ನಡಿಗರಿಗೆ ನಾವು ನೀಡಿರುವ 5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡುತ್ತೇವೆ’

-ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ 

‘ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲ ಗ್ಯಾರಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ’

-ಸಿದ್ದರಾಮಯ್ಯ, ನಿಯೋಜಿತ ಮುಖ್ಯಮಂತ್ರಿ

ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಸಿದ್ದರಾಮಯ್ಯ, ಈ ಹಿಂದೆ 2014ರಿಂದ 2018ರ ತನಕ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಬಳಿಕ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು.

ಡಿ. ದೇವರಾಜ ಅರಸು ನಂತರ ಮುಖ್ಯಮಂತ್ರಿಯಾಗಿ 5 ವರ್ಷ ಅವಧಿ ಪೂರ್ಣಗೊಳಿಸಿದ ಏಕೈಕ ಮುಖ್ಯಮಂತ್ರಿ ಇವರಾಗಿದ್ದಾರೆ. ಮುಖ್ಯಮಂತ್ರಿಯಾದ ನಂತರ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ ನೀಡುವ 'ಅನ್ನಭಾಗ್ಯ' ಸೇರಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರು.

ಇದನ್ನೂ ಓದಿ.... ನಮ್ಮದು ವಿವೇಕಾನಂದ, ನಾರಾಯಣ ಗುರು, ಗಾಂಧೀಜಿ ಬೋಧಿಸಿರುವ ಹಿಂದುತ್ವ: ವಾರ್ತಾಭಾರತಿ ವಿಶೇಷ ಸಂದರ್ಶನದಲ್ಲಿ ಸಿದ್ದರಾಮಯ್ಯ

Similar News