ಪೊಲೀಸ್ ದೌರ್ಜನ್ಯ ಪ್ರಕರಣ | ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್ಸೈ ಸಹಿತ ಇಬ್ಬರ ಅಮಾನತು
ಪುತ್ತೂರು ಡಿವೈಎಸ್ಪಿ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗೆ ಶಿಫಾರಸು
ಪುತ್ತೂರು, ಮೇ 18: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೆಸರಿನಲ್ಲಿ ಶ್ರದ್ಧಾಂಜಲಿ ಬ್ಯಾನರ್ ತೂಗುಹಾಕಿ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮೇಲೆ ನಡೆದಿರುವ ಪೊಲೀಸ್ ದೌರ್ಜನಕ್ಕೆ ಸಂಬಂಧಿಸಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪುತ್ತೂರು ಡಿವೈಎಸ್ಪಿ ವಿರುದ್ಧ ಇಲಾಖಾ ತನಿಖೆಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮಟೆ ತಿಳಿಸಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣೆಯ ಪಿಎಸ್ಸೈ ಶ್ರೀನಾಥ್ ರೆಡ್ಡಿ ಮತ್ತು ಗ್ರಾಮಾಂತರ ಠಾಣೆಯ ಪೊಲೀಸ್ ಸಿಬ್ಬಂದಿ ಹರ್ಷಿತ್ ಅವರನ್ನು ಅಮಾನತುಗೊಳಿಸಲಾಗಿದೆ. ಪುತ್ತೂರು ಡಿವೈಎಸ್ಪಿ ವೀರಯ್ಯ ಹಿರೇಮಠ್ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದವರು ಪ್ರಕಟನೆಯಲ್ಲಿ ಮಾಹಿತಿ ನೀಡಿದ್ದಾರೆ.
ಶ್ರದ್ಧಾಂಜಲಿ ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನರಿಮೊಗರು ನಿವಾಸಿಗಳಾದ 9 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಲಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿ ಪೊಲೀಸ್ ದೌರ್ಜನ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಬಳಿಕದ ಬೆಳವಣಿಗೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಆರೋಪಿಗಳನ್ನು ಜಾಮೀನಿನ ಮೇಲೆ ಠಾಣೆಯಿಂದ ಕರೆದೊಯ್ದಿದ್ದರು.
ದೌರ್ಜನಕ್ಕೆ ಒಳಗಾದವರ ಪೈಕಿ ಅಭಿ ಯಾನೆ ಅವಿನಾಶ್(26) ಮತ್ತು ಗುರುಪ್ರಸಾದ್(24) ಎಂಬವರನ್ನು ಬುಧವಾರ ರಾತ್ರಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಅವಿನಾಶ್ ತಂದೆ ವೇಣುನಾಥ ಎಂಬವರು ನೀಡಿರುವ ದೂರಿನಂತೆ ಪುತ್ತೂರು ಡಿವೈಎಸ್ಪಿ ವೀರಯ್ಯ ಹಿರೇಮಠ್, ಪುತ್ತೂರು ಗ್ರಾಮಾಂತರ ಠಾಣೆಯ ಪಿಎಸ್ಸೈ ಶ್ರೀನಾಥ್ ರೆಡ್ಡಿ ಮತ್ತು ಗ್ರಾಮಾಂತರ ಠಾಣೆಯ ಪೊಲೀಸ್ ಸಿಬ್ಬಂದಿ ಹರ್ಷಿತ್ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಸಿಆರ್ ನಂ 39/23, ಯು/ಎಸ್ 323,324,506, ಆರ್/ಡಬ್ಲ್ಯು 341ಪಿಸಿ ಪ್ರಕರಣದ ಅಡಿಯಲ್ಲಿ ದೂರು ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿವೈಎಸ್ಪಿ ಅವರಿಗೆ ವಹಿಸಿ ಕೊಡಲಾಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್ಸೈ ಹಾಗೂ ಹರ್ಷಿತ್ ಪಿಸಿ ಅವರನ್ನು ಸೇವೆಯಿಂದ ಅಮಾನತ್ತು ಗೊಳಿಸಲಾಗಿದೆ ಹಾಗೂ ಪುತ್ತೂರು ಡಿಎಸ್‌ಪಿ ಅವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಆಸ್ಪತ್ರೆಗೆ ಶಾಸಕ ಪೂಂಜಾ ಭೇಟಿ: ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಳೆದ ರಾತ್ರಿ ಭೇಟಿಯಾಗಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಒತ್ತಾಯಿಸುತ್ತೇನೆ ಎಂದರು. ಈ ವೇಳೆ ಅರುಣ್ ಕುಮಾರ್ ಪುತ್ತಿಲ ಮತ್ತಿತರರು ಉಪಸ್ಥಿತರಿದ್ದರು.