ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಗೆ ಪ್ರಧಾನಿ ಸಹಿತ ಗಣ್ಯರ ಶುಭ ಹಾರೈಕೆ

Update: 2023-05-20 13:14 GMT

ಬೆಂಗಳೂರು, ಮೇ 20: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು, ಇಬ್ಬರು ನಾಯಕರು ಹಾಗೂ ನೂತನ ಸಂಪುಟ ಸಚಿವರಿಗೆ ಪ್ರಧಾನಿ ಮೋದಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

ಶನಿವಾರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರದಗ್ರಹಣ ಮಾಡಿದ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಶುಭ ಹಾರೈಸಿದ್ದಾರೆ.

‘ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಡಿ.ಕೆ.ಶಿವಕುಮಾರ್ ಅವರು ಹಾಗೂ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

‘ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿ, ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಳ್ಳಲಿರುವ ಸಿದ್ದರಾಮಯ್ಯನವರಿಗೆ ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಹೃತ್ಪೂರ್ವಕ ಅಭಿನಂದನೆಗಳು’ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

‘ದಕ್ಷಿಣದಲ್ಲಿ ಪ್ರಕಟವಾದ ಅರುಣೋದಯವು ಭಾರತದ ಇತರ ಭಾಗಗಳಿಗೂ ಹರಡಬೇಕು ಮತ್ತು ಬೆಂಗಳೂರಿನಲ್ಲಿಂದು ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರ ಪ್ರಮಾಣ ವಚನ ಸಮಾರಂಭವು ಅಂತಹ ಬದಲಾವಣೆಯ ಘಂಟಾಘೋಷವಾಗಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

‘ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಾಗೂ ನೂತನ ಸಚಿವರಿಗೆ ಅಭಿನಂದನೆಗಳು. ನಾಡಿನ ಜನರ ನಿರೀಕ್ಷೆಯಂತೆ, ನೀಡಿರುವ ಎಲ್ಲ ಭರವಸೆಯನ್ನು ಈಡೇರಿಸುವ ಮೂಲಕ, ತಮ್ಮ ನೇತೃತ್ವದಲ್ಲಿ ಉತ್ತಮ ಆಡಳಿತ ದೊರೆಯಲೆಂದು ಹಾರೈಸುತ್ತೇನೆ’ ಎಂದು ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಟ್ವೀಟ್ ಮೂಲಕ ತಿಳಿಸಿದ್ದಾರೆ.

‘ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರು ಹಾಗೂ ಸಚಿವ ಸಂಪುಟದ ಸರ್ವ ಸದಸ್ಯರಿಗೂ ಅಭಿನಂದನೆಗಳು’ ಎಂದು ಮಾಜಿ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಜನಹಿತದ ಕ್ರಮಕ್ಕೆ ಜೆಡಿಎಸ್ ಬೆಂಬಲ:

‘ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು. ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ನೇತೃತ್ವದ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ’

-ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ

Similar News