ಮೇ 22ರಿಂದ ವಿಧಾನ ಮಂಡಲ ವಿಶೇಷ ಅಧಿವೇಶನ: ಮೇ 24ಕ್ಕೆ ಸ್ಪೀಕರ್ ಚುನಾವಣೆ
ಬೆಂಗಳೂರು: ರಾಜ್ಯದ 16ನೆ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನವು ನಾಳೆ (ಮೇ 22)ಯಿಂದ ಆರಂಭವಾಗಲಿದ್ದು, ಮೇ 24ರ ವರೆಗೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಐತಿಹಾಸಿಕ ಗೆಲುವಿನ ಮೂಲಕ ಅಧಿಕಾರಕ್ಕೆ ಬಂದಿದ್ದು, ನೂತನ ಶಾಸಕರ ಪದಗ್ರಹಣ ಹಾಗೂ ಸ್ಪೀಕರ್ ಆಯ್ಕೆಯ ಚುನಾವಣೆ ಹಿನ್ನೆಲೆಯಲ್ಲಿ ಈ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದೆ.
ಸೋಮವಾರ(ಮೇ 22) ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಅಧಿವೇಶನ ಆರಂಭಗೊಳ್ಳಲಿದ್ದು, ಹಂಗಾಮಿ ಸ್ಪೀಕರ್ ಆಗಿ ನೇಮಕವಾಗಿರುವ ಹಿರಿಯ ಸದಸ್ಯ ಆರ್.ವಿ. ದೇಶಪಾಂಡೆ ಸದನದ ಕಾರ್ಯ ಕಲಾಪಗಳನ್ನು ನಡೆಸಿಕೊಡಲಿದ್ದಾರೆ.
ಹದಿನಾರನೇ ವಿಧಾನಸಭೆಗೆ ಆಯ್ಕೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯದ ಎಲ್ಲ 224 ಮಂದಿ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಅವರು ಅಧಿಕಾರ ಪದ ಮತ್ತು ಗೌಪ್ಯತಾ ಪ್ರಮಾಣ ವಚನವನ್ನು ಬೋಧಿಸಲಿದ್ದಾರೆ.
ಮೇ 24ರಂದು ವಿಧಾನಸಭೆಯ ನೂತನ ಸ್ಪೀಕರ್(ಸಭಾಧ್ಯಕ್ಷ) ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬಹುತೇಕ ಆರ್.ವಿ.ದೇಶಪಾಂಡೆ ಅವರನ್ನೆ ಸ್ಪೀಕರ್ ಮಾಡಲು ಆಡಳಿತರೂಢ ಕಾಂಗ್ರೆಸ್ ಪಕ್ಷ ಉದ್ದೇಶಿಸಿದೆ ಎಂದು ತಿಳಿದು ಬಂದಿದೆ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಆರ್.ವಿ.ದೇಶಪಾಂಡೆಗೆ ಸ್ಪೀಕರ್ ಸ್ಥಾನ ಅಲಂಕರಿಸಲು ಮನಸ್ಸಿಲ್ಲ. ಒಂದು ವೇಳೆ ಹೈಕಮಾಂಡ್ ಸೂಚಿಸಿದ್ದಲ್ಲಿ ಅವರು ಒಪ್ಪಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ವಿಪಕ್ಷ ನಾಯಕ ಯಾರು?: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್, ಅವರೊಂದಿಗೆ ಎಂಟು ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ, ಮೊದಲ ಸಚಿವ ಸಂಪುಟ ಸಭೆಯನ್ನು ನಡೆಸಿ ಆಗಿದೆ. ಆದರೆ, ವಿರೋಧ ಪಕ್ಷವಾಗಿರುವ ಬಿಜೆಪಿಯನ್ನು ಸದನದಲ್ಲಿ ಮುನ್ನಡೆಸುವವರು ಯಾರು? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಹೆಸರುಗಳು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಕೇಳಿ ಬರುತ್ತಿದೆ.
ನಿಷೇಧಾಜ್ಞೆ ಜಾರಿ: ವಿಶೇಷ ಅಧಿವೇಶನದ ಹಿನ್ನೆಲೆಯಲ್ಲಿ ಮೇ 22ರಿಂದ 24ರ ವರೆಗೆ ಪ್ರತಿದಿನ ಬೆಳಗ್ಗೆ 6 ರಿಂದ ರಾತ್ರಿ 12ಗಂಟೆಯ ವರೆಗೆ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ (ಅನುಮತಿ ಪಡೆದು ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ) ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.