ಮೇ 23ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಬಿಎಂಟಿಸಿ ಬಸ್‍ ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

Update: 2023-05-22 15:01 GMT

ಬೆಂಗಳೂರು, ಮೇ 22: ನಾಳೆಯಿಂದ (ಮೇ 23) ಜೂ.2 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಬಿಎಂಟಿಸಿಯು ವಿದ್ಯಾರ್ಥಿ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ. ಆದರೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ನಡೆಯಲಿದೆ.

ಹಾಗಾಗಿ ಪೂರಕ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Similar News