ಪತ್ನಿ ಹತ್ಯೆಗೈದಿದ್ದ ಆರೋಪಿಯ ಜೀವಾವಧಿ ಶಿಕ್ಷೆ ಏಳು ವರ್ಷಕ್ಕೆ ಇಳಿಸಿದ ಹೈಕೋರ್ಟ್

Update: 2023-05-28 12:33 GMT

ಬೆಂಗಳೂರು, ಮೇ 28: ಪತ್ನಿ ಹತ್ಯೆಗೈದಿದ್ದ ಆರೋಪಿಯ ಜೀವಾವಧಿ ಶಿಕ್ಷೆಯನ್ನು ಏಳು ವರ್ಷಗಳ ಕಠಿಣ ಶಿಕ್ಷೆಗೆ ಮಾರ್ಪಾಡು ಮಾಡಿ ಹೈಕೋರ್ಟ್ ಆದೇಶಿಸಿದೆ. 

ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ್ದ ಕ್ರಮವನ್ನು ಪ್ರಶ್ನಿಸಿ ದೊಡ್ಡಬಳ್ಳಾಪುರ ತಾಲೂಕಿನ ಬೊಮ್ಮನಹಳ್ಳಿಯ ಗ್ರಾಮದ ಆರೋಪಿ ರಾಜೇಶ್(39) ಎಂಬುವರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ. ಅಲ್ಲದೇ, ಅಪರಾಧಿ ತನ್ನ ಹೆಣ್ಣು ಮಕ್ಕಳ ಹೆಸರಿಗೆ 3 ಲಕ್ಷ ರೂ.ಗಳ ಮೊತ್ತವನ್ನು ಠೇವಣಿಯಾಗಿ ಇರಿಸಬೇಕು ಎಂದು ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಆರೋಪಿಯ ಪತ್ನಿ ಮತ್ತೊಬ್ಬರೊಂದಿಗೆ ಇದ್ದುದ್ದನ್ನು ನೋಡಿದ್ದರು. ಈ ಹಿನ್ನೆಲೆಯಲ್ಲಿ ಸ್ವಯಂ ನಿಯಂತ್ರಣ ಹಾಗೂ ಮಾನಸಿಕ ಸಮತೋಲನ ಕಳೆದುಕೊಂಡು ಈ ಹತ್ಯೆ ನಡೆಸಿದ್ದಾರೆ. ಜೊತೆಗೆ, ಘಟನಾ ಸ್ಥಳಕ್ಕೆ ನಿರಾಯುಧನಾಗಿ ಹೋಗಿದ್ದ. ಹೆಂಡತಿಯನ್ನು ಕೊಲೆ ಮಾಡುವ ಯಾವುದೇ ಉದ್ದೇಶ ಹೊಂದಿರಲಿಲ್ಲ. ಹೀಗಾಗಿ, ಇದನ್ನು ಕೊಲೆಯೆಂದು ಪರಿಗಣಿಸಲು ಸಾಧ್ಯವಿಲ್ಲ. ಹೀಗಾಗಿ, ಶಿಕ್ಷೆ ರದ್ದು ಮಾಡಬೇಕು ಎಂದು ಕೋರಿದ್ದರು. ವಾದವನ್ನು ಪರಿಗಣಿಸಿದ ನ್ಯಾಯಪೀಠ, ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಿ ಆದೇಶಿಸಿದೆ.

ದೊಡ್ಡಬೆಳವಂಗಲ ಪೊಲೀಸರು ಈ ಕೊಲೆ ಪ್ರಕರಣವನ್ನು ದಾಖಲಿಸಿ, ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ 45 ಸಾವಿರ ರೂ. ದಂಡ ವಿಧಿಸಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. 

Similar News