ರಾಜ್ಯದಲ್ಲಿ ಮೇ 30ರಿಂದ ಭಾರೀ ಮಳೆ ಸಾಧ್ಯತೆ: 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Update: 2023-05-29 15:02 GMT

ಬೆಂಗಳೂರು, ಮೇ 29: ರಾಜ್ಯದಲ್ಲಿ ಮೇ 30ರಿಂದ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ. ಹೀಗಾಗಿ, ದಕ್ಷಿಣ ಒಳನಾಡಿನ ಹತ್ತು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದೆ. ಆದರೆ, ಅದಕ್ಕೂ ಮೊದಲೇ ರಾಜ್ಯದಲ್ಲಿ ಮಳೆ ಅಬ್ಬರಿಸುವ ಸಾಧ್ಯತೆಗಳಿವೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕಡಿಮೆಯಾಗಿರುವ ಮಳೆಯ ತೀವ್ರತೆ ಮೇ 30ರಿಂದ ಹೆಚ್ಚಾಗಲಿದೆ. ಮತ್ತೆ ಮೇ 31 ಹಾಗೂ ಜೂನ್ 1ರಂದು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ. ಹೀಗಾಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ ಜಿಲ್ಲೆಗಳಿಗೆ ಮೇ 31 ಹಾಗೂ ಜೂನ್ 1ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಅನಾಹುತಗಳಾಗಿದ್ದು, ಕೆಲವರು ಈ ಮಳೆಯಿಂದಾಗಿ ಜೀವ ಸಹ ಕಳೆದುಕೊಂಡಿದ್ದಾರೆ. ಹೀಗಾಗಿ, ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. 

Similar News