ಸರ್ಕಾರಿ ಸಭೆಯಲ್ಲಿ ಬಿಜೆಪಿ ನಾಯಕ ಸಂಬಿತ್ ಪಾತ್ರ ಭಾಗಿ: ಕಾಂಗ್ರೆಸ್ ತರಾಟೆ

Update: 2023-05-30 07:41 GMT

ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದಿದ್ದ ಉನ್ನತ ಮಟ್ಟದ ಸಭೆಯಲ್ಲಿ ಬಿಜೆಪಿ ನಾಯಕ ಸಂಬಿತ್ ಪಾತ್ರಾ ಭಾಗವಹಿಸಿರುವುದರ ಕುರಿತು ಕಾಂಗ್ರೆಸ್ ಸರಕಾರವನ್ನು ಪ್ರಶ್ನಿಸಿದೆ. 

ಈ ಕುರಿತು ಟ್ವೀಟ್ ಮಾಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಪವನ್ ಖೇರಾ, "ಬಿಜೆಪಿಯ ವಕ್ತಾರ ಸಂಬಿತ್ ಪಾತ್ರಾ ಯಾವುದೇ ಸರ್ಕಾರಿ ಹುದ್ದೆಯನ್ನು ಹೊಂದಿಲ್ಲದೆ ಇರುವುದರಿಂದ ಅವರು ಮಣಿಪುರ ಹಿಂಸಾಚಾರದ ಕುರಿತು ಕೇಂದ್ರ ಗೃಹ ಸಚಿವರ ನೇತೃತ್ವದಲ್ಲಿ ಆಯೋಜನೆಗೊಂಡ ಸರ್ಕಾರದ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗುವಂತಿಲ್ಲ" ಎಂದು ಆಕ್ಷೇಪಿಸಿದ್ದರು. ಇದನ್ನು ಮತ್ತೊಬ್ಬ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕೂಡಾ ಸಮರ್ಥಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕೆಲವು ನೆಟ್ಟಿಗರು, ಕಾಂಗ್ರೆಸ್ ನಾಯಕರು ಇಂತಹ ಪ್ರತಿಪಾದನೆಗಳನ್ನು ಮಾಡುವ ಮುನ್ನ ಮಾಹಿತಿ ಸಂಗ್ರಹ ಕೈಗೊಳ್ಳುವುದು ಉಚಿತ. ಸಂಬಿತ್ ಪಾತ್ರಾ ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದಾರೆ. ಈ ಸಂಸ್ಥೆಯು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಮಣಿಪುರ ಹಿಂಸಾಚಾರದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂಫಾಲದಲ್ಲಿ ಉನ್ನತ ಮಟ್ಟದ ಪರಾಮರ್ಶೆ ಸಭೆ ನಡೆಯಿತು. ಈ ಸಭೆಯಲ್ಲಿ ಮುಖ್ಯಮಂತ್ರಿ ಎನ್. ಬೀರೇನ್ ಸಿಂಗ್, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಮತ್ತಿತರ ರಾಜ್ಯ ಸಂಪುಟ ಸಚಿವರು ಭಾಗವಹಿಸಿದ್ದರು.

Similar News