ಜೂ.2ರಂದು ಸಚಿವ ಸಂಪುಟ ಸಭೆ

Update: 2023-05-31 16:35 GMT

ಬೆಂಗಳೂರು: ರಾಜ್ಯ ಸರಕಾರದ ಮಹಿಳೆಯರಿಗೆ ಉಚಿತ ಸಾರಿಗೆ, 200 ಯುನಿಟ್ ವರೆಗೆ ಉಚಿತ ವಿದ್ಯುತ್ ಸೇರಿದಂತೆ ಐದು ಗ್ಯಾರಂಟಿ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿರ್ಣಯ ಪ್ರಕಟಿಸಲು ಜೂ.1ರಂದು ಕರೆಯಲಾಗಿದ್ದ ಸಚಿವ ಸಂಪುಟ ಸಭೆಯನ್ನು ಜೂ.2ಕ್ಕೆ ಮುಂದೂಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಂದು ವಿಧಾನಸೌಧದಲ್ಲಿ ನಡೆದ ಸಚಿವರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಗ್ಯಾರಂಟಿ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯದ ಆರ್ಥಿಕ ಪರಿಸ್ಥಿತಿ ಮೇಲೆ ಬೀರಬಹುದಾದ ಪರಿಣಾಮಗಳ ಕುರಿತು ಆರ್ಥಿಕ ಇಲಾಖೆ ಅಧಿಕಾರಿಗಳು ಸರಕಾರದ ಗಮನ ಸೆಳೆದಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿರುವ ಭರವಸೆಯನ್ನು ಈಡೇರಿಸಲೇಬೇಕಾದ ಇಕ್ಕಟ್ಟಿಗೆ ಸರಕಾರ ಸಿಲುಕಿದೆ. ಆದುದರಿಂದ, ಯಾವ ರೀತಿಯಲ್ಲಿ ಈ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಬಹುದು ಎಂಬುದರ ಕುರಿತು ಮತ್ತಷ್ಟು ವಿವರಣೆಗಳನ್ನು ನೀಡಲು ಆರ್ಥಿಕ ಇಲಾಖೆ ಅಧಿಕಾರಿಗಳು ಒಂದು ದಿನ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.

ಶುಕ್ರವಾರ ಸಚಿವ ಸಂಪುಟ ಸಭೆಯ ಬಳಿಕ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟದ ಸದಸ್ಯರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಸಚಿವ ಸಂಪುಟದ ನಿರ್ಣಯವನ್ನು ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.

Similar News