5 ಗ್ಯಾರಂಟಿಗಳನ್ನು ಷರತ್ತುರಹಿತವಾಗಿ ಜಾರಿಗೊಳಿಸದಿದ್ದರೆ ಬೀದಿಗಿಳಿದು ಹೋರಾಟ: ನಳಿನ್ ಕುಮಾರ್ ಕಟೀಲ್

Update: 2023-06-01 10:49 GMT

ಮಂಗಳೂರು,ಜೂ.1: ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದ ಐದು ಗ್ಯಾರಂಟಿಯನ್ನು ಕೂಡಲೇ ಷರತ್ತುರಹಿತವಾಗಿ ಜಾರಿಗೊಳಿಸದಿದ್ದರೆ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆ ಜಾರಿಗೆ ಮಾರ್ಗಸೂಚಿಯ ಬಗ್ಗೆ ಮಾತನಾಡುತ್ತಿದೆ. ಆದರೆ ಚುನಾವಣಾ ಪೂರ್ವದಲ್ಲಿ ಯೋಜನೆಯ ಬಗ್ಗೆ ಯಾವುದೇ ಷರತ್ತು ಇರಲಿಲ್ಲ ಎಂದು ಹೇಳಿದರು.

ಚುನಾವಣಾ ಪೂರ್ವದಲ್ಲಿ ಗ್ಯಾರಂಟಿ ಯೋಜನೆಯ ಸವಲತ್ತು‘ ನನಗೂ ಇದೆ,ನಿಮಗೂ ಇದೆ ’, ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಅಧಿಕಾರ ವಹಿಸಿಕೊಂಡು 24 ಗಂಟೆಗಳಲ್ಲಿ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡು 20 ದಿನಗಳಾದರೂ ಯಾವುದೇ ಕ್ರಮಕೈಗೊಂಡಿಲ್ಲ. ಕಾಂಗ್ರೆಸ್ ಜನರಿಗೆ ವಂಚನೆ ಮಾಡಿದೆ. ಸುಳ್ಳು ಹೇಳಿ ಅಧಿಕಾರ ಪಡೆದಿದೆ. ಅಂದರೆ ಸುಳ್ಳುಗಾರರ ಪಕ್ಷವಾಗಿದೆ ಕಾಂಗ್ರೆಸ್. ಜನರನ್ನು ಗೊಂದಲದಲ್ಲಿ ಸಿಲುಕಿಸಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಅಡ್ಡದಾರಿ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈಗ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಅರ್ಥವಾಗಿದೆ. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಆರ್ಥಿಕವಾಗಿ ಜಾರಿಗೊಳಿಸುವುದು ಕಷ್ಟ ಎನ್ನುವುದು ಅವರಿಗೆ ಮನವರಿಕೆಯಾಗಿದೆ. ಆರ್ಥಿಕ ಇಲಾಖೆಯು ಈಗಾಗಲೇ ಸೂಚನೆ ನೀಡಿದೆ ಎಂದರು.

ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಮನೆಮನೆಗಳಲ್ಲಿ , ಬೀದಿಗಳಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಬಿಜೆಪಿ ಜನಪರ ಪಕ್ಷವಾಗಿದೆ. ಕಾಂಗ್ರೆಸ್ ಜನರಿಗೆ ಮೋಸ ಮಾಡಿದರೆ ಬಿಜೆಪಿ ಸುಮ್ಮನಿರುವುದದಿಲ್ಲ. ಜನರ ಪರ ಹೋರಾಟ ಮುಂದುವರಿಸಲಿದೆ ಎಂದು ನಳಿನ್ ಕುಮಾರ್ ಹೇಳಿದರು. 

ಸುದ್ದಿಗೋಷ್ಠಿಯಲ್ಲಿ ಮಂಗಳೂರು ನಗರದ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಪಕ್ಷದ ಮುಖಂಡರುಗಳಾದ ರವಿಶಂಕರ ಮಿಜಾರು, ರಾಮದಾಸ್ ಬಂಟ್ವಾಳ, ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.

Similar News