ಐದು ಗ್ಯಾರಂಟಿ ಯೋಜನೆ ಅನುಷ್ಠಾನ: ಇಂದು ಮಹತ್ವದ ಸಚಿವ ಸಂಪುಟ ಸಭೆ

Update: 2023-06-02 04:30 GMT

ಬೆಂಗಳೂರು, ಜೂ.2: ರಾಜ್ಯದ ಜನತೆಗೆ ಚುನಾವಣೆ ಪೂರ್ವ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ.

ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ(ಶಕ್ತಿ), ಮನೆಗಳಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್(ಗೃಹ ಜ್ಯೋತಿ), ಅನ್ನಭಾಗ್ಯ ಯೋಜನೆಯಡಿ ತಲಾ 10 ಕೆಜಿ ಅಕ್ಕಿ, ನಿರುದ್ಯೋಗಿ ಯುವಕರಿಗೆ ಯುವ ನಿಧಿ, ಕುಟುಂಬದ ನಿರ್ವಹಣೆ ಮಾಡುವ ಮನೆಯ ಯಜಮಾನಿಗೆ 2 ಸಾವಿರ ರೂ.ಆರ್ಥಿಕ ನೆರವು ನೀಡುವ(ಗೃಹ ಲಕ್ಷ್ಮಿ), ಸಾರಿಗೆ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಪ್ರಕಟಿಸಲಿದ್ದಾರೆ.

ಆರ್ಥಿಕ ಇಲಾಖೆಯ ಮನವಿ ಹಿನ್ನೆಲೆಯಲ್ಲಿ ಜೂ.1ರ ಬದಲಾಗಿ ಜೂ.2ರಂದು ಸಚಿವ ಸಂಪುಟ ಸಭೆ ಕರೆಯಲಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಯಾವ ರೀತಿಯಲ್ಲಿ ಮಾಡಲಾಗುವುದು, ಅದರ ರೂಪುರೇಷೆಗಳು ಯಾವ ರೀತಿಯಲ್ಲಿ ಇರಲಿವೆ, ಯಾವಾಗಿನಿಂದ ಈ ಯೋಜನೆಗಳು ಜಾರಿಯಾಗಲಿವೆ ಎಂಬುದರ ಕುರಿತು ಸ್ವತಃ ಮುಖ್ಯಮಂತ್ರಿ ಪತ್ರಿಕಾಗೋಷ್ಠಿ ನಡೆಸಿ ನಾಡಿನ ಜನತೆಗೆ ಮಾಹಿತಿ ನೀಡಲಿದ್ದಾರೆ.

ಉಚಿತ ಪ್ರಯಾಣ, ಉಚಿತ ವಿದ್ಯುತ್ ಸೇರಿದಂತೆ ಇನ್ನಿತರ ಯೋಜನೆಗಳ ಕುರಿತು ದೇಶದ ವಿವಿಧ ರಾಜ್ಯಗಳಿಂದ ಅಧಿಕಾರಿಗಳು ಮಾಹಿತಿ ತರಿಸಿಕೊಂಡಿದ್ದು, ಮುಖ್ಯಮಂತ್ರಿ ಸಹಿತ ಸಂಬಂಧಪಟ್ಟ ಇಲಾಖೆಯ ಸಚಿವರ ಗಮನ ಸೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಆ ವರದಿಗಳ ಆಧಾರದಲ್ಲಿ ನಮ್ಮ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಸ್ವರೂಪ ಹೇಗಿರಲಿದೆ ಎಂಬುದರ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಹಾಗೂ ಆರ್ಥಿಕ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಅಧಿಕಾರಿಗಳು ಪ್ರಾತ್ಯಕ್ಷಿಕೆ ಮೂಲಕ ಗ್ಯಾರಂಟಿ ಯೋಜನೆಗಳನ್ನು ಯಾವ ರೀತಿ ಜಾರಿ ಮಾಡಬಹುದು ಎಂಬುದನ್ನು ತಿಳಿಸಿದ್ದಾರೆ. ಅಲ್ಲದೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದರ ಕುರಿತು ಅಧಿಕಾರಿಗಳು ಮನದಟ್ಟು ಮಾಡಿಕೊಟ್ಟಿದ್ದಾರೆ.

Similar News