ಮುರುಘಾ ಶ್ರೀ ವಿರುದ್ಧದ ಪೊಕ್ಸೊ ಪ್ರಕರಣ: ಸಾಕ್ಷಿ ವಿಚಾರಣೆಗೆ ಹೈಕೋರ್ಟ್ ತಡೆ

Update: 2023-06-02 16:21 GMT

ಬೆಂಗಳೂರು, ಜೂ.2: ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮತ್ತು ಈ ಆರೋಪಕ್ಕೆ ಹೊಂದಿಕೊಂಡ ವಿವಿಧ ಗುರುತರ ಅಪರಾಧಗಳ ಅಡಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕ್ರಿಮಿನಲ್ ಪ್ರಕರಣಗಳ ಸಾಕ್ಷಿ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಜುಲೈ 1ರವರೆಗೆ ತಡೆಯಾಜ್ಞೆ ನೀಡಿದೆ.

ಈ ಕುರಿತು ಆರೋಪಿ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ಎರಡು ಕ್ರಿಮಿನಲ್ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸಾಕ್ಷಿ ವಿಚಾರಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಮುರುಘಾ ಶರಣರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ದೋಷಾರೋಪ ಹೊರಿಸಿ ಸಾಕ್ಷಿ ವಿಚಾರಣೆ ನಡೆಸಲು ಆದೇಶಿಸಿದೆ. ಈ ಆದೇಶ ದೋಷಪೂರಿತವಾಗಿದ್ದು, ಇದಕ್ಕೆ ತಡೆಯಾಜ್ಞೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಚಿತ್ರದುರ್ಗ ಸೆಷನ್ಸ್ ಕೋರ್ಟ್ನ ವಿಚಾರಣೆಯ ಮುಂದಿನ ಪ್ರಕ್ರಿಯೆಗೆ ಜು.1ರವರೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿತು.

Similar News