ರೋಹಿಣಿ ಸಿಂಧೂರಿಯಿಂದ ಮಾನನಷ್ಟ ಮೊಕದ್ದಮೆ ಪ್ರಕರಣ: ರೂಪಾ ಮೌದ್ಗಿಲ್ ರಿಗೆ ಜಾಮೀನು

Update: 2023-06-07 05:57 GMT

ಬೆಂಗಳೂರು, ಜೂ.6: ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮಂಗಳವಾರ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾರೆ.

ಪ್ರಕರಣ ಸಂಬಂಧ ನಗರದ 24ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಗೆ ಡಿ.ರೂಪಾ ಹಾಜರಾಗಿದ್ದರು. ಅವರ ಹಾಜರಾತಿಯನ್ನು ದಾಖಲಿಸಿಕೊಂಡ ನ್ಯಾಯಾಲಯ, 25 ಸಾವಿರ ರೂ. ಮೊತ್ತದ ವೈಯಕ್ತಿಕ ಬಾಂಡ್ ಒದಗಿಸುವಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತು.

ಡಿ.ರೂಪಾ 2023ರ ಫೆ.18 ಮತ್ತು 19ರಂದು ಫೇಸ್‌ಬುಕ್ ಖಾತೆಯಲ್ಲಿ ತನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ತಮ್ಮ ತೇಜೋವಧೆ ಮಾಡುವ ದುರುದ್ದೇಶದಿಂದಲೇ ರೂಪಾ ಈ ಕೃತ್ಯ ಎಸಗಿರುವುದರಿಂದ ತನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾ.3ರಂದು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಿದ್ದರು.

ಅಲ್ಲದೆ, ಮಾನಹಾನಿ ಮಾಡಿ ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ.ರೂಪಾರಿಂದ ಒಂದು ಕೋಟಿ ರೂಪಾಯಿ ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು. ಇದನ್ನು ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಆದೇಶಿಸಿತ್ತು. ಅಲ್ಲದೆ, 2023ರ ಮಾ.24ರಂದು ರೂಪಾರಿಗೆ ಸಮನ್ಸ್ ಜಾರಿ ಮಾಡಿತ್ತು. ಇದರಿಂದಾಗಿ ಮಂಗಳವಾರ ರೂಪಾ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾಗಿದ್ದರು.

Similar News