ಕೊಪ್ಪಳದಲ್ಲಿ ಬಾಲಕಿ ಮೃತ್ಯು: ಕಲುಷಿತ ನೀರು ಸೇವನೆ ಕಾರಣ ಶಂಕೆ

Update: 2023-06-08 15:42 GMT

ಕೊಪ್ಪಳ, ಜೂ. 8: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ, ಭೇದಿ ಉಂಟಾಗಿ ಬಾಲಕಿ ಅಸುನೀಗಿದ್ದಾಳೆ ಎಂದು ಶಂಕಿಸಲಾಗಿದೆ.  

ನಿರ್ಮಲಾ ಬೆಳಗಲ್(10) ಮೃತಪಟ್ಟ ಬಾಲಕಿ. ಬುಧವಾರ ರಾತ್ರಿ ಬಾಲಕಿಗೆ ವಾಂತಿ, ಭೇದಿ ಆಗಿತ್ತು. ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗಿರಲಿಲ್ಲ. ಪೋಷಕರು ಗುರುವಾರ ಬೆಳಗ್ಗೆ ಕುಷ್ಟಗಿ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಮನೆಯಲ್ಲಿಯೇ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಾಲಕಿ, ಆಸ್ಪತ್ರೆಗೆ ಕರೆತರುವ ಮುನ್ನವೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಇದೇ ಗ್ರಾಮದಲ್ಲಿ ಈಗಾಗಲೇ ಕಲುಷಿತ ನೀರು ಸೇವಿಸಿ 15ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ಧಾರೆ. ಘಟನೆಗೆ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯವೆಂದು ಆರೋಪಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಷ್ಟಗಿ ತಾಲೂಕು ಬಿಜಕಲ್ ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಲಕಾನಂದ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಎಲ್ಲ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಪರೀಕ್ಷೆ ಮಾಡಲಾಗುತ್ತಿದೆ. ಬಾಲಕಿಯ ಸಾವಿನ ನಿಖರ ಕಾರಣವೇನು ಎನ್ನುವುದರ ಬಗ್ಗೆ ತಜ್ಞರು ವರದಿ ನೀಡಲಿದ್ದಾರೆ' ಎಂದು ಅವರು ಹೇಳಿದರು.

Similar News