ಪಾಟ್ನಾದ ಪ್ರತಿಪಕ್ಷಗಳ ಸಭೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ: ವೇಣುಗೋಪಾಲ್

Update: 2023-06-09 05:58 GMT

ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳನ್ನು ಸಜ್ಜುಗೊಳಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಕರೆದಿರುವ ಪ್ರತಿಪಕ್ಷಗಳ ಉನ್ನತ ನಾಯಕರ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಶುಕ್ರವಾರ ಖಚಿತಪಡಿಸಿದ್ದಾರೆ.

ANI ಜೊತೆ ಮಾತನಾಡಿದ ಕೆಸಿ ವೇಣುಗೋಪಾಲ್, "ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಪಾಟ್ನಾದಲ್ಲಿ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ. ದೇಶವನ್ನು ಹಾಳು ಮಾಡುತ್ತಿರುವ ಈ ಶಕ್ತಿಗಳ ವಿರುದ್ಧ ಹೋರಾಡಲು ವಿರೋಧ ಪಕ್ಷಗಳ ನಡುವೆ ಒಗ್ಗಟ್ಟು ಮೂಡಿಸಲು ಇದು ಸುಸಮಯ’’ ಎಂದು ಹೇಳಿದರು.

ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಗುರುವಾರ ಖಚಿತಪಡಿಸಿದ್ದಾರೆ.

ಗುರುವಾರ ಪಾಟ್ನಾದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಸುಮಾರು 15 ಪಕ್ಷಗಳು ಸಭೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಹೇಳಿದರು.

ಆದರೆ, ತೇಜಸ್ವಿ ಯಾದವ್ ಗೆ  ತೆಲಂಗಾಣ ಮುಖ್ಯಮಂತ್ರಿಯೊಂದಿಗೆ ಮಾತನಾಡಲು ಅವಕಾಶ ಸಿಗದ ಕಾರಣ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಉಪಸ್ಥಿತಿಯನ್ನು ಖಚಿತಪಡಿಸಲಾಗಿಲ್ಲ.

ಪ್ರಧಾನಿ ನರೇಂದ್ರ ಮೋದಿ ಹಾಗೂ  ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಸಮಾನ ಮನಸ್ಕ ವಿರೋಧ ಪಕ್ಷಗಳ ಒಗ್ಗೂಡುವಿಕೆಗೆ ಅಡಿಪಾಯ ಹಾಕುವ ಉದ್ದೇಶದಿಂದ ಈ ಸಭೆಯನ್ನು ಮೂಲತಃ ಜೂನ್ 12 ರಂದು ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ  ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಜೂನ್ 12 ರಂದು ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ ನಂತರ ಸಭೆಯ ದಿನಾಂಕ ಬದಲಿಸಲು ನಿರ್ಧರಿಸಲಾಯಿತು.

Similar News