×
Ad

ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು ಪ್ರಕರಣ: ವಸತಿ ಶಾಲೆಯ ಮುಖ್ಯಸ್ಥನ ಬಂಧನ

Update: 2023-06-11 10:18 IST

ಸಾಗರ, ಜೂ.11: ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವನಶ್ರೀ ವಸತಿ ಶಾಲೆಯ ಮುಖ್ಯಸ್ಥ ಎಚ್.ಪಿ.ಮಂಜಪ್ಪರನ್ನು ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಸತಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಸೊರಬ ತಾಲೂಕಿನ ಶಿವಪುರ ಗ್ರಾಮದ ತೇಜಸ್ವಿನಿ ಜೂ.8ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು.

ವಿದ್ಯಾರ್ಥಿನಿ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಪೋಷಕರು ಹಾಗೂ ವಿವಿಧ ಸಂಘಟನೆಗಳು ಶನಿವಾರ ವನಶ್ರೀ ಶಾಲೆ ಎದುರು ಧರಣಿ ನಡೆಸಿತ್ತು. ಈ ಸಂದರ್ಭದಲ್ಲಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೆಲವು ವಿದ್ಯಾರ್ಥಿನಿಗಳು ಶಾಲಾ ಮುಖ್ಯಸ್ಥ ಮಂಜಪ್ಪ ಅವರು ಲೈಂಗಿಕ ಕಿರುಕುಳ ನೀಡುವುದು, ಬೆದರಿಕೆ ಹಾಕುವುದು, ಅಶ್ಲೀಲ ಪದ ಬಳಸಿ ಬೈಯುತ್ತಿದ್ದರು ಎಂದು ಆರೋಪಿಸಿದ್ದರು. ಪೋಷಕರು ಹಾಗೂ ಸಂಘ-ಸಂಸ್ಥೆಗಳು ಧರಣಿ ನಡೆಸಿದ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಮಂಜಪ್ಪ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.

ಬಳಿಕ ಮೃತ ತೇಜಸ್ವಿನಿ ಕುಟುಂಬ ನೀಡಿದ ದೂರಿನ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಮಂಜಪ್ಪರ ವಿರುದ್ಧ ಜಾತಿ ನಿಂದನೆ, ಪೊಕ್ಸೊ ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಿದ್ದರು.

ರವಿವಾರ ಆರೋಪಿಯನ್ನು ಉಪವಿಭಾಗೀಯ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Similar News