ಚಾಮರಾಜನಗರ: ‘ಶಕ್ತಿ’ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಲನೆ
ಚಾಮರಾಜನಗರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು, ಕೆ.ಎಸ್. ಆರ್. ಟಿ. ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಬಸ್ ಟಿಕೇಟ್ ನೀಡುವ ಮೂಲಕ ಚಾಲನೆ ನೀಡಿದರು.
ಸಮಾರಂಭದಲ್ಲಿ ಮಾತನಾಡಿದ ಸಚಿವ ಕೆ.ವೆಂಕಟೇಶ್, ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಕಾರ್ಡ್ ನಲ್ಲಿ ತಿಳಿಸಿರುವ ಐದು ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ ತರುವಲ್ಲಿ ಯಾವುದೇ ಅನುಮಾನವಿಲ್ಲ, ವಿರೋಧ ಪಕ್ಷದವರು ಟೀಕೆ ವದಂತಿಗಳನ್ನು ಹಚ್ಚಿಸುವರು. ಅದಕ್ಕೆ ರಾಜ್ಯದ ಜನತೆ ಕಿವಿಕೊಡಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಚುನಾವಣೆ ಪೂರ್ವ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಹಾಗೂ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಮಾಜಿ ನಗರಸಭಾ ಅಧ್ಯಕ್ಷೆ ಚಿನ್ನಮ್ಮ, ಪೊಲೀಸ್ ವರಿಷ್ಠಾಧಿಕಾರಿ ಪದ್ಮನಿ ಸಾಹೂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಹಲವಾರು ಗಣ್ಯರು ವೇದಿಕೆಯಲ್ಲಿ ಹಾಜರಿದ್ದರು.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಶಾಸಕ ಹೆಚ್.ಎಂ. ಗಣೇಶ್ ಪ್ರಸಾದ್, ಕೊಳ್ಳೇಗಾಲದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ, ಹನೂರಿನಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಕ್ಕೆ ಚಾಲನೆ ನೀಡಿದರು.