×
Ad

ಕೊಡವರಿಗೆ ರಾಜಕೀಯ ಸ್ವಾಯತ್ತತೆ: ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

Update: 2023-06-15 19:18 IST

ಬೆಂಗಳೂರು, ಜೂ. 15: ಕೊಡವ ಸಮುದಾಯದವರಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತತೆಯ ಸ್ಥಾನಮಾನ ಕಲ್ಪಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್(ಸಿಎನ್‍ಸಿ) ಸಲ್ಲಿಸಿರುವ ಮನವಿ ಪರಿಗಣಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಬೇಕೆಂದು ಹೈಕೋರ್ಟ್, ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ. 

ಈ ಸಂಬಂಧ ರಾಜ್ಯಸಭಾ ಸದಸ್ಯರೂ ಆದ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನವನ್ನು ನೀಡಿದೆ. 

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನ್ಯಾಯಾಲಯ ಕಳೆದ ಬಾರಿ ನೀಡಿದ್ದ ನಿರ್ದೇಶನದಂತೆ ಅರ್ಜಿಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಅನ್ನು ಪಕ್ಷಗಾರರನ್ನಾಗಿ ಮಾಡಲಾಗಿದೆ. ಆ ಕುರಿತು ಅರ್ಜಿಯಲ್ಲಿ ತಿದ್ದುಪಡಿ ಮಾಡಿ ಅದರ ಪ್ರತಿಯನ್ನು ಪ್ರತಿವಾದಿಗಳಿಗೆ ತಲುಪಿಸಲಾಗಿದೆ ಎಂದು ವಿವರಿಸಿದರು.

ಈ ವೇಳೆ ಸಿಎನ್‍ಸಿ ಪರ ವಕೀಲರು, ತಾವು ಅರ್ಜಿದಾರರ ವಾದವನ್ನು ಬೆಂಬಲಸಲಿದ್ದೇವೆ. ಆ ಕುರಿತು ಪ್ರಮಾಣಪತ್ರ ಸಲ್ಲಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು. ಕೇಂದ್ರ, ರಾಜ್ಯ ಸರಕಾರದ ಪರ ವಕೀಲರು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯನ್ನು ಆ.3ಕ್ಕೆ ಮುಂದೂಡಿತು. ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು.

Similar News