ದ್ವಿತೀಯ PUC ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ
ಬೆಂಗಳೂರು: ಮೇ-ಜೂನ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ.
ಪರೀಕ್ಷೆ ಬರೆದ ವಿದ್ಯಾರ್ಥಿಗಳು https://karresults.nic.in/ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶ ಪಡೆದುಕೊಳ್ಳಬಹುದಾಗಿದೆ.
1,58,881 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 1,57,756 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 50,478 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. 28,901 ಬಾಲಕರು ಹಾಗೂ 21,577 ಬಾಲಕಿಯರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಫಲಿತಾಂಶವು 29.37ರಷ್ಟು ಇದ್ದು, ನಗರ ಪ್ರದೇಶದ ವಿದ್ಯಾರ್ಥಿಗಳ ಫಲಿತಾಂಶ ಶೇ.32ರಷ್ಟು ಇದೆ. ಹಾಜರಾತಿ ಕೊರತೆಯಿಂದಾಗಿ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಲಾದ ವಿದ್ಯಾರ್ಥಿಗಳ ಫಲಿತಾಂಶವು ಶೇ.15.65ರಷ್ಟಿದ್ದು, ಪರೀಕ್ಷೆಗೆ ಹಾಜರಾದ 313 ವಿದ್ಯಾರ್ಥಿಗಳ ಪೈಕಿ 49 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಮರು ಮೌಲ್ಯಮಾಪನ: ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಇಂದಿನಿಂದ ಜೂ.26 ವರೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಿದ ಬಳಿಕ ಸ್ಕ್ಯಾನಿಂಗ್ ಪ್ರತಿ ಡೌನ್‍ಲೋಡ್ ಮಾಡಿಕೊಳ್ಳಲು ಜೂ.24ರಿಂದ ಜೂ.30ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕಡ್ಡಾಯವಾಗಿ ಸ್ಕ್ಯಾನಿಂಗ್ ಪ್ರತಿಯನ್ನು ಪಡೆದವರು ಮಾತ್ರ ಮರು ಮೌಲ್ಯಮಾಪನಕ್ಕೆ, ಮರುಎಣಿಕೆಗೆ ಅವಕಾಶ ನೀಡಲಾಗುವುದು. ಮರುಮೌಲ್ಯಮಾಪನಕ್ಕೆ ಜೂ.24ರಿಂದ ಜೂ.30ರವೆರೆಗೆ ಅವಕಾಶ ಕಲ್ಪಿಸಲಾಗಿದೆ.
ಸ್ಕ್ಯಾನಿಂಗ್ ಪ್ರತಿಯನ್ನು ಪಡೆಯಲು ಪ್ರತಿ ವಿಷಯಕ್ಕೆ 530 ರೂ.ಗಳ ಶುಲ್ಕವನ್ನು ಹಾಗೂ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಪ್ರತಿ ವಿಷಯಕ್ಕೆ 1,670 ರೂ.ಗಳ ಶುಲ್ಕವನ್ನು ನೀಡಲಾಗುವುದು. ಅಂಕಗಳ ಮರುಎಣಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ತಿಳಿಸಿದೆ.