Bagalkot | ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಸಿಎಂ ಸಿದ್ದರಾಮಯ್ಯ ಖಂಡನೆ
"ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ ಸಂಯಮದಿಂದ ವರ್ತಿಸಬೇಕು"
ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆ ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ಮಾರಕವಾಗಿದ್ದು, ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ನಿಷ್ಪಕ್ಷಪಾತ ತನಿಖೆ ಕೈಗೊಂಡು ದುಷ್ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಕೆಲ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತವಾಗಲಿದೆ. ನಾಡಿನ ಜನರಿಗೆ ಭಯಮುಕ್ತ ಹಾಗೂ ನೆಮ್ಮದಿಯ ಜೀವನ ಒದಗಿಸುವುದು ನಮ್ಮ ಮೊದಲ ಆದ್ಯತೆ. ಜನರ ಶಾಂತಿ-ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ ಅಥವಾ ಶಕ್ತಿಗಳನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ ಸಂಯಮದಿಂದ ವರ್ತಿಸಬೇಕು. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.