ಬಾಗಲಕೋಟೆ: ಖಾಸಗಿ ಆಸ್ಪತ್ರೆಯೊಂದರಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ 29 ವರ್ಷದ ಮಹಿಳೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಮೃತ ಮಹಿಳೆಯನ್ನು ಶಿಲ್ಪಾ ಭಂಜತ್ರಿ ಎಂದು ಗುರುತಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ರಕ್ತದ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿ ರಕ್ತ ನೀಡಲಾಗಿದೆ. ಆದರೆ ರಕ್ತದ ಮಾದರಿಯನ್ನು ಸರಿಯಾಗಿ ಪರಿಶೀಲಿಸದೆ ಹಾಗೂ ಹೊಂದಾಣಿಕೆ ಮಾಡದೆ ರಕ್ತ ನೀಡಲಾಗಿದೆ. ರಕ್ತ ನೀಡಿದ ಬಳಿಕ ಶಿಲ್ಪಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಂತರ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮೃತರ ಪತಿ ಜಗದೀಶ ಭಂಜತ್ರಿ ಹಾಗೂ ಕುಟುಂಬಸ್ಥರು “ಇದು ಸಹಜ ಸಾವು ಅಲ್ಲ, ವೈದ್ಯರ ನಿರ್ಲಕ್ಷ್ಯದಿಂದ ಸಂಭವಿಸಿದ ಸಾವು” ಎಂದು ಆರೋಪಿಸಿದ್ದು, ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ವೈದ್ಯ ಪ್ರಮೋದ್ ಮಿರ್ಜಾ ಅವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಕುಟುಂಬಸ್ಥರು ತಮ್ಮ ಮನವಿಗೆ ಸೂಕ್ತ ಸ್ಪಂದನೆ ದೊರೆಯದಿದ್ದರೆ ಆಸ್ಪತ್ರೆ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor