×
Ad

ಯಡಿಯೂರಪ್ಪ ಭ್ರಷ್ಟಾಚಾರದ ಬಗ್ಗೆ ಯತ್ನಾಳ್-ವಿಶ್ವನಾಥ್ ಬಹಿರಂಗವಾಗಿ ಹೇಳಿದ್ದಾರೆ : ಸಿಎಂ ಸಿದ್ದರಾಮಯ್ಯ

Update: 2026-04-06 20:59 IST

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ಅವರದೇ ಪಕ್ಷದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬಹಿರಂಗವಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಸಿದ್ದರಾಮಯ್ಯ ವಿಶ್ವಾಸದ್ರೋಹಿ ಎಂದು ಯಡಿಯೂರಪ್ಪ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸೋಮವಾರ ನಗರದ ಹೆಲಿಪ್ಯಾಡ್‍ನಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ ಎನ್ನುವುದನ್ನು ಉಲ್ಲೇಖಿಸಿ ಯಡಿಯೂರಪ್ಪ ಆರೋಪ ಮಾಡಬೇಕು. ಅರಳು ಮರಳು ಯಡಿಯೂರಪ್ಪ ಆಧಾರ ಸಹಿತವಾಗಿ ಮಾತನಾಡಬೇಕು ಎಂದರು.

ತಮ್ಮ ಜಾತಿಯ ಅಭ್ಯರ್ಥಿ ಆದ ಕಾರಣ ಸಿದ್ದರಾಮಯ್ಯ ಬಾಗಲಕೋಟೆಯಲ್ಲಿ ಠಿಕಾಣಿ ಹೂಡಿದ್ದಾರೆ ಎನ್ನುವ ಯಡಿಯೂರಪ್ಪ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ದಾವಣಗೆರೆ ದಕ್ಷಿಣದಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಅಲ್ಲೆ ಠಿಕಾಣಿ ಹೂಡಿ ಪ್ರಚಾರ ಮಾಡಿದ್ದೇನೆ. ಅವರು ಯಾವ ಜಾತಿ ?. ನಾವು ಜಾತಿ ಕಾರಣಕ್ಕೆ ಪ್ರಚಾರ ಮಾಡುವುದಿಲ್ಲ. ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುತ್ತೇವೆ ಎಂದರು.

ಉಪ ಚುನಾವಣೆ ನಡೆಯುತ್ತಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ನಮ್ಮ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸುತ್ತೇವೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ತಮ್ಮ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ತಿರುಗೇಟು ನೀಡಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News