ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ.ಮೇಟಿ ನಿಧನ
ಎಚ್.ವೈ.ಮೇಟಿ
ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹುಲ್ಲಪ್ಪ ಯಮನಪ್ಪ ಮೇಟಿ (ಎಚ್.ವೈ.ಮೇಟಿ) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ.
ಎಚ್.ವೈ.ಮೇಟಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು, ಕೆಲ ದಿನಗಳಿಂದ ನಗರದ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೆ ಇಂದು ಅಸುನೀಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಎಚ್.ವೈ.ಮೇಟಿ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಸಂಖ್ಯೆ ಬಂಧು-ಮಿತ್ರರನ್ನು ಅಗಲಿದ್ದಾರೆ.
ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ 1946ರ ಅಕ್ಟೋಬರ್ 9ರಂದು ಜನಿಸಿದ್ದ ಹುಲ್ಲಪ್ಪ ಯಮನಪ್ಪ ಮೇಟಿ ಅವರು, 1989ರಲ್ಲಿ ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದಿಂದ ಜಾತ್ಯತೀತ ಜನತಾದಳ (ಜೆಡಿಎಸ್) ದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಗೆಲುವು ಸಾಧಿಸಿ, ಶಾಸಕರಾಗಿ ವಿಧಾನಸಭೆಯನ್ನು ಪ್ರವೇಶಿಸಿದ್ದರು.
ಬಳಿಕ 1994ರಲ್ಲಿ ಮತ್ತೊಮ್ಮೆ ಗುಳೇದಗುಡ್ಡದಿಂದ ಜೆಡಿಎಸ್‍ನಿಂದ ಸ್ಪರ್ಧಿಸಿ ಗೆಲುವು ಕಂಡಿದ್ದರು. ಅಲ್ಲದೆ, ಎಚ್.ಡಿ.ದೇವೇಗೌಡ ನೇತೃತ್ವದ ಸಚಿವ ಸಂಪುಟದಲ್ಲಿ ಅರಣ್ಯ ಖಾತೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮೇಟಿ ಅವರು, ಜೆಡಿಎಸ್‍ನಿಂದ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. 1998ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋಲು ಕಂಡಿದ್ದರು.
ಕ್ಷೇತ್ರ ವಿಂಗಡಣೆ ಸಂದರ್ಭದಲ್ಲಿ ಗುಳೇದಗುಡ್ಡ ಕ್ಷೇತ್ರ ರದ್ದಾಗಿದ್ದರಿಂದ 2008ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯರ ಬೆಂಬಲಿಗರಾದ ಎಚ್.ವೈ.ಮೇಟಿ, 2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಅಬಕಾರಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. 2018ರಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಸದ್ಯ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೇಟಿ ಅವರು, ವಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೇಟಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಮೇಟಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.
ಮೇಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಸಚಿವರಾದ ಎಂ.ಬಿ.ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಬೈರತಿ ಸುರೇಶ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇಂದು ಅಂತ್ಯಕ್ರಿಯೆ: ಮೃತರ ಪಾರ್ಥಿವ ಶರೀರವನ್ನು ಬಾಗಲಕೋಟೆಗೆ ಸ್ಥಳಾಂತರಿಸಲಿದ್ದು, ನಾಳೆ(ನ.5) ಮಧ್ಯಾಹ್ನ ಎರಡು ಗಂಟೆಯ ಸುಮಾರಿಗೆ ಸಕಲ ಸರಕಾರಿ ಗೌರವದೊಂದಿಗೆ ಮೇಟಿಯವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.