ಬಾಗಲಕೋಟೆ ಜಿಲ್ಲೆಯಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಪರಿಶೀಲನೆ
ಬಾಗಲಕೋಟೆ: ಜಿಲ್ಲೆಯ ವಿವಿಧ ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಕೇಂದ್ರ ಬರ ಅಧ್ಯಯನ ತಂಡವು ಸೋಮವಾರ ಭೇಟಿ ನೀಡಿ ಬೆಳೆ ಹಾನಿ ಹಾಗೂ ರೈತರ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿತು.
ನಿರ್ದೇಶಕ ಡಾ. ಮನ್ ಸಿಂಗ್ ಅವರ ನೇತೃತ್ವದ ಮೂರನೇ ತಂಡದಲ್ಲಿ ಕೇಂದ್ರ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಪಾರ್ಥ ಪಾಲ್ ಹಾಗೂ ರಾಕೇಶ್ ಕುಮಾರ್ ಇದ್ದರು. ತಂಡವು ಬಾಗಲಕೋಟೆ, ಗುಳೇದಗುಡ್ಡ, ಹುನಗುಂದ ಹಾಗೂ ಇಳಕಲ್ ತಾಲೂಕಿನ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯ ಮಾಹಿತಿ ಪಡೆದುಕೊಂಡಿತು.
ಮೊದಲಿಗೆ ಗುಳೇದಗುಡ್ಡ ತಾಲೂಕಿನ ಹಳದೂರು ಗ್ರಾಮಕ್ಕೆ ಭೇಟಿ ನೀಡಿದ ತಂಡವು ಬರದಿಂದ ಹಾನಿಗೊಳಗಾದ ಮೆಕ್ಕೆಜೋಳ ಬೆಳೆ ಪರಿಶೀಲಿಸಿತು. ಬಳಿಕ ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದ ಬಳಿ ಕಬ್ಬು ಬೆಳೆ ಹಾನಿಯಾಗಿರುವ ಕುರಿತು ರೈತರಿಂದ ಮಾಹಿತಿ ಪಡೆದುಕೊಂಡಿತು.
ನಂತರ ಭಗವತಿ ಗ್ರಾಮದ ಬಳಿ ಈರುಳ್ಳಿ ಬೆಳೆ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಕೇಂದ್ರ ತಂಡವು ಬೆಳೆಗಳ ಸ್ಥಿತಿಯನ್ನು ಪರಿಶೀಲಿಸಿ, ಹಾನಿಗೊಳಗಾದ ರೈತರೊಂದಿಗೆ ಚರ್ಚಿಸಿ ಮಾಹಿತಿ ಸಂಗ್ರಹಿಸಿತು.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕ ಉಮೇಶ ಮೇಟಿ ಅವರು ಕೇಂದ್ರ ಅಧ್ಯಯನ ತಂಡದೊಂದಿಗೆ ಉಪಸ್ಥಿತರಿದ್ದು, ಬರದಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಬೆಳೆ ಹಾನಿಯ ಕುರಿತು ತಂಡದ ಗಮನಕ್ಕೆ ತಂದರು.