×
Ad

NELAMANGALA | ಕಾರು-ಬಸ್ ನಡುವೆ ಭೀಕರ ರಸ್ತೆ ಅಪಘಾತ: ಐವರು ಯುವಕರು ಮೃತ್ಯು

Update: 2026-02-15 10:11 IST

ಬೆಂಗಳೂರು ಗ್ರಾಮಾಂತರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಮೃತಪಟ್ಟ ಘಟನೆ ನೆಲಮಂಗಲದ ಜಿಂದಾಲ್ ನಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿ ಮೃತಪಟ್ಟಿದ್ದರೆ, ಓರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ. ಮೃತರಲ್ಲಿ ಲಿಖಿತ್, ಹರ್ಷಿತ್ ಗುರುತು ಪತ್ತೆಯಾಗಿದ್ದು, ಇನ್ನುಳಿದ ಮೂವರು ಯುವಕರ ಗುರುತು ಪತ್ತೆಯಾಗಿಲ್ಲ.

ಐವರು ಸ್ನೇಹಿತರಿದ್ದ ಕಾರು ಕಳೆದ ರಾತ್ರಿ 12 ಗಂಟೆ ಸುಮಾರಿಗೆ ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಜಿಂದಾಲ್ ಬಳಿಯ ಫ್ಲೈ ಓವರ್ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಅತೀ ವೇಗದಲ್ಲಿದ್ದ ಕಾರು ಡಿವೈಡರ್ ಅನ್ನು ಹಾರಿ ಬೆಂಗಳೂರಿನಿಂದ ಹುಬ್ಬಳಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸಿನ ಮುಂಭಾಗವೂ ಜಖಂ ಆಗಿದ್ದು, ಅದರಲ್ಲಿದ್ದ 43 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಮೃತ ಪೈಕಿ ದೊಡ್ಡಬಳ್ಳಾಪುರ ಮೂಲದವರಾಗಿರುವ ಹರ್ಷಿತ್, ರಾಜಾನುಕುಂಟೆ ಬಳಿಯ ಸಾಯಿ ಕಾಲೇಜು ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದರು. ಆ ದುರ್ಘಟನೆಯ ಆಘಾತ ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭವಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News