ಬೆಂಗಳೂರು | ಕೆಎಸ್ಸಾರ್ಟಿಸಿ ಬಸ್–ಕ್ಯಾಂಟರ್ ನಡುವೆ ಢಿಕ್ಕಿ: 15ಕ್ಕೂ ಹೆಚ್ಚು ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ, 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ.
ಹೊಸಕೋಟೆ ನಗರದ ಎಂ.ವಿ.ಜೆ. ಆಸ್ಪತ್ರೆಯ ಸಮೀಪ ಈ ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ನುಜ್ಜುಗುಜ್ಜಾಗಿವೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 15 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅತಿ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಗಾಯಗೊಂಡವರನ್ನು ತಕ್ಷಣವೇ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಸಕೋಟೆ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪಘಾತದ ಪರಿಣಾಮ ಕೆಲವು ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ವಾಹನ ತೆರವು ಕಾರ್ಯಾಚರಣೆಗೆ ಮುಂದಾಗಿ ಸಂಚಾರ ಸರಾಗವಾಗುವಂತೆ ಕ್ರಮ ಕೈಗೊಂಡಿದ್ದಾರೆ.