×
Ad

‘ಶ್ರಮಿಕ ವಸತಿ ಶಾಲೆ’ ಶಾಸಕರ ಬೇಡಿಕೆ ಪರಿಶೀಲನೆಗೆ ಕ್ರಮ : ಸಚಿವ ಸಂತೋಷ್‌ ಲಾಡ್

Update: 2025-08-13 19:48 IST


ಬೆಂಗಳೂರು, ಆ. 13: ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ತಮ್ಮ ತಮ್ಮ ಕ್ಷೇತ್ರದಲ್ಲೂ ಶಾಲೆಗಳನ್ನು ಆರಂಭಿಸಬೇಕು ಎಂದು ಶಾಸಕರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್ ತಿಳಿಸಿದರು.

ಬುಧವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಯು.ಬಿ.ಬಣಕಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘2025-26ನೇ ಸಾಲಿನ ಬಜೆಟ್‍ನಲ್ಲಿ ಘೋಷಣೆ ಮಾಡಿದಂತೆ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ. ಈ ಶಾಲೆಗಳ ಕಟ್ಟಡ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಬಜೆಟ್‍ನಲ್ಲಿ ಘೋಷಣೆ ಮಾಡಿರುವಂತೆ ಪ್ರತಿ ಜಿಲ್ಲೆಗೆ ಒಂದು ವಸತಿ ಶಾಲೆ ನಿರ್ಮಾಣ ಮಾಡಲು ಅವಕಾಶ ಇರುತ್ತದೆ ಎಂದು ಅವರು ವಿವರಿಸಿದರು.

ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಭವಿಷ್ಯಕ್ಕಾಗಿ ಹಂತ-ಹಂತವಾಗಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸಲಾಗುವುದು. ಹಿರೇಕೆರೂರು ಗ್ರಾಮಸ್ಥರು ಸುಮಾರು 10 ಎಕರೆ ಜಮೀನನ್ನು ಶಾಲೆ ನಿರ್ಮಾಣಕ್ಕೆ ನೀಡಲು ಮುಂದಾಗಿದ್ದಾರೆ ಎಂದು ಯು.ಬಿ.ಬಣಕಾರ್ ತಿಳಿಸಿದರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News