ಒಳಮೀಸಲಾತಿ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಆದ್ಯತೆ : ಸಿದ್ದರಾಮಯ್ಯ
ಬೆಂಗಳೂರು, ಆ.15 : ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಹಾಗೂ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವಿಚಾರಗಳನ್ನು(ಜಾತಿಗಣತಿ) ಸರಕಾರವು ಗಂಭೀರವಾಗಿ ಪರಿಗಣಿಸಿದ್ದು, ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅಂಕಿ-ಅಂಶಗಳ ಸಂಗ್ರಹದ ನಂತರ, ಯೋಜನೆಗಳಲ್ಲಿ ಸಮುದಾಯಗಳಿಗೆ ವಿಶೇಷ ಪ್ರಾತಿನಿಧ್ಯ ಕೊಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಗುರುವಾರ ಇಲ್ಲಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜರೋಹಣ ನೆರೆವೇರಿಸಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮರ್ಪಕವಾದ ಅಂಕಿ-ಅಂಶಗಳು ಮಾತ್ರ ಜನರ ಬದುಕಿನ ಗತಿಯನ್ನು ಬದಲಾಯಿಸಲು ಕಾರಣವಾಗಬಲ್ಲವು. ಹೀಗಾಗಿ ಜನರ ಬದುಕಿನ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಲು ತೀರ್ಮಾನಿಸಿದ್ದೇವೆ ಎಂದರು.
ಪರಿಶಿಷ್ಟ ಜಾತಿ, ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಶಿಕ್ಷೆ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ವ್ಯಾಪ್ತಿಯಲ್ಲಿ 33 ವಿಶೇಷ ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗಿದೆ. 17 ಸಾವಿರಕ್ಕೂ ಹೆಚ್ಚಿನ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗಿದೆ. ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾಯ್ದೆಯಡಿ ಈ ಬಾರಿ 42,018 ಕೋಟಿ ರೂ.ಗಳನ್ನು ಒದಗಿಸಿ ಪರಿಶಿಷ್ಟ ಸಮುದಾಯಗಳ ಬಲವರ್ಧನೆಗಾಗಿ ಶ್ರಮಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.
ಚುನಾವಣೆಗೆ ಮೊದಲು ನೀಡಿದ್ದ ಭರವಸೆಯಂತೆ ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಸಾಧ್ಯವಾಗಿಸಲು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿವರ್ಷ 5 ಸಾವಿರ ಕೋಟಿ ರೂ.ಗಳನ್ನು ಒದಗಿಸಿ ಶಿಕ್ಷಣ, ಆರೋಗ್ಯ, ಕೈಗಾರಿಕಾಭಿವೃದ್ಧಿ, ಮೂಲಭೂತ ಸೌಕರ್ಯ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ. 7 ಜಿಲ್ಲೆಗಳ 38 ವಿಧಾನಸಭಾ ಕ್ಷೇತ್ರಗಳ ಗ್ರಾಮೀಣ ಪ್ರದೇಶದ 1,150 ಕಿ.ಮೀ. ರಸ್ತೆಗಳನ್ನು ‘ಕಲ್ಯಾಣ ಪಥ’ ಕಾರ್ಯಕ್ರಮದಡಿ 1.000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಅವರು ವಿವರಿಸಿದರು.
ನಮ್ಮ ವಸತಿ ಶಾಲೆಗಳು, ವಸತಿ ನಿಲಯಗಳಲ್ಲಿ 8.36 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ. ವಸತಿ ಶಾಲೆಗಳ ವಿದ್ಯಾರ್ಥಿಗಳ ಉತ್ತೀರ್ಣತೆಯ ಪ್ರಮಾಣ ಶೇ.98ರಷ್ಟಿದೆ ಎಂಬುದು ಸಂತೋಷದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಹೊಸದಾಗಿ ವಸತಿ ಶಾಲೆಗಳು, ವಸತಿ ನಿಲಯಗಳನ್ನು ಸ್ಥಾಪಿಸುತ್ತಿದ್ದೇವೆ ಎಂದು ಅವರು ವಿವರಿಸಿದರು.
ಈ ವರ್ಷ 2,500 ಕೋಟಿ ರೂ. ವೆಚ್ಚದಲ್ಲಿ 500 ಕರ್ನಾಟಕ ಪಬ್ಲಿಕ್ ಸ್ಕೂಲ್-ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುತ್ತಿದ್ದೇವೆ. 53 ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್, ಹಾಲು, ವಾರದ ಎಲ್ಲ ದಿನ ಮೊಟ್ಟೆ ಅಥವಾ ಬಾಳೆಹಣ್ಣು, ಮಧ್ಯಾಹ್ನದ ಬಿಸಿಯೂಟ ನೀಡುತ್ತಿದ್ದೇವೆ. ಅತಿಥಿ ಶಿಕ್ಷಕರಿಗೆ ಮತ್ತು ಬಿಸಿಯೂಟ ತಯಾರಿಸುವ ಸಿಬ್ಬಂದಿಗಳಿಗೆ ಗೌರವಧನ ಹೆಚ್ಚಿಸಿದ್ದೇವೆ. ಶಿಕ್ಷಕರ ನೇಮಕಾತಿಗೂ ಆದ್ಯತೆ ನೀಡುತ್ತಿದ್ದೇವೆ. 2,500 ಕೋಟಿ ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್‍ಗಳನ್ನು ಉನ್ನತೀಕರಿಸುತ್ತಿದ್ದೇವೆ. 13 ಹೊಸ ತಾಂತ್ರಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲೀಕರಣಗೊಳಿಸಲು ಸ್ವಸಹಾಯ ಗುಂಪಿನ ಮಹಿಳೆಯರಿಗೆ ರಾಜ್ಯಾದ್ಯಂತ ಒಂದೇ ಮಾದರಿಯಲ್ಲಿ ‘ಅಕ್ಕ ಕೆಫೆ’ಗಳನ್ನು ಸ್ಥಾಪಿಸಲು ಕ್ರಮವಹಿಸಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಂದ ಅಕ್ಕ ಕೆಫೆ ನಡೆಸಲಾಗುತ್ತಿದೆ. 250 ಕೋಟಿ ರೂಪಾಯಿಗಳ ಬದ್ಧ ನಿಧಿಯ ಅನುದಾನದ ಬೆಂಬಲದೊಂದಿಗೆ 1ಸಾವಿರಕ್ಕೂ ಹೆಚ್ಚು ಸ್ಟಾಟ್‍ಅಪ್‍ಗಳನ್ನು ಬೆಂಬಲಿಸುವ ಮೂಲಕ ಕರ್ನಾಟಕವು ಮುಂಚೂಣಿ ರಾಜ್ಯವಾಗಿದೆ ಎಂದು ಅವರು ಹೇಳಿದರು.
ಸೇವಾ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಮಗ್ರ ಕಾರ್ಮಿಕರ ಹಿತಾಸಕ್ತಿಯನ್ನು ರಕ್ಷಿಸುತ್ತಿರುವುದಷ್ಟೇ ಅಲ್ಲದೆ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿರುವ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಈ ವರ್ಷದಿಂದ ಪ್ಲಾಟ್ ಫಾರಂ ಆಧಾರಿತ ಗಿಗ್ ಕಾರ್ಮಿಕರ ಕಾನೂನನ್ನು ಜಾರಿಗೊಳಿಸುತ್ತಿದ್ದೇವೆ. ಈ ಕಾರ್ಮಿಕರಿಗೆ 4 ಲಕ್ಷ ರೂ.ಗಳವರೆಗೆ ವಿಮಾ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.
ಆರೋಗ್ಯ ಇಲಾಖೆಯಲ್ಲಿ ನಮ್ಮ ಸರಕಾರವು ಹಲವಾರು ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ. ಕ್ಯಾನ್ಸರ್ ರೋಗಿಗಳ ಪ್ರಯಾಣ ಮತ್ತು ಚಿಕಿತ್ಸೆಯ ಹೊರೆ ಕಡಿಮೆ ಮಾಡಲು ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.
ಆಂಬ್ಯುಲೆನ್ಸ್ ಸೇವೆಗಳನ್ನು ರಾಜ್ಯಾದ್ಯಂತ ಕೇಂದ್ರೀಯ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರದಲ್ಲಿ ನಿರ್ವಹಿಸುವಂತೆ ಮಾಡಲು ತೀರ್ಮಾನಿಸಿದ್ದೇವೆ. ಸಾರ್ವಜನಿಕ ಆರೋಗ್ಯ ಕಾಪಾಡುವ ದೃಷ್ಟಿಯಲ್ಲಿ ಕಲಬೆರಕೆ ಮತ್ತು ಜನರ ಆರೋಗ್ಯಕ್ಕೆ ಹಾನಿ ಉಂಟುಮಾಡುವ ಆಹಾರಗಳನ್ನು ವಿಶ್ಲೇಷಣೆಗೆ ಒಳಪಡಿಸಿ ಅವುಗಳನ್ನು ನಿಷೇಧಿಸುವ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ನಮ್ಮ ಹೊಸ ತಲೆಮಾರು ಮೊಬೈಲ್ ಫೋನ್ ಇಂಟರ್‍ನೆಟ್ ಮುಂತಾದವುಗಳ ಭರಾಟೆಯಲ್ಲಿ ವಿಪರೀತ ತಲ್ಲಣಗಳನ್ನು ಎದುರಿಸುತ್ತಿದೆ. ಖಿನ್ನತೆ, ಆತಂಕ, ವಿನಾಕಾರಣ ಸಿಟ್ಟು, ದ್ವೇಷ ಮುಂತಾದ ಭಾವನೆಗಳಲ್ಲಿ ಸಿಲುಕಿ ಸಂಕಷ್ಟ ಪಡುತ್ತಿದೆ. ಈ ಸಾಮಾಜಿಕ ಸಮಸ್ಯೆಯನ್ನು ಹೋಗಲಾಡಿಸಲು ನಾವೆಲ್ಲರೂ ಸೇರಿ ಹೊಸ ದಾರಿಗಳನ್ನು ಹುಡುಕಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ‘ಮೊಬೈಲ್ ಬಿಡಿ - ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮವನ್ನು ರೂಪಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವೆಂದು ಘೋಷಿಸಿದ್ದೇವೆ. ಹಾಗೆಯೇ ನಾವೆಲ್ಲರೂ ನಮ್ಮ ಹೆಮ್ಮೆಯ ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಘೋಷಿಸಬೇಕಾಗಿದೆ. ಈ ಹೋರಾಟದಲ್ಲಿ ಪ್ರತಿ ಪ್ರಜೆಯೂ ಯೋಧರಂತೆ ಕೆಲಸ ಮಾಡಬೇಕಾಗಿದೆ. ಸರಕಾರವು ಈಗಾಗಲೇ ಈ ವಿಚಾರದಲ್ಲಿ ಸಕಲ ಆಯಾಮಗಳಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದರು.