ದೇವನಹಳ್ಳಿಯಲ್ಲಿ ಶಾಲಾ ಕಟ್ಟಡದ ಕಿಟಕಿ ಕುಸಿದ ಪ್ರಕರಣ | ಕಟ್ಟಡ ಪರಿಶೀಲಿಸಿ ವರದಿ ನೀಡಲು ಮಧು ಬಂಗಾರಪ್ಪ ಸೂಚನೆ
ಬೆಂಗಳೂರು, ಆ.26: ಶಾಲಾ ಕಟ್ಟಡದ ಕಿಟಕಿ ಕುಸಿದು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಶಾಲಾ ಕಟ್ಟಡವನ್ನು ಸಂಪೂರ್ಣ ಪರಿಶೀಲಿಸಿ ವರದಿ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ಪ್ರಕಟನೆ ಹೊರಡಿಸಿರುವ ಅವರು, ಮಕ್ಕಳ ಆರೋಗ್ಯ ಮತ್ತು ಭದ್ರತೆ ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಘಟನೆ ನಡೆದ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ನಗರದ ಹೊರವಲಯದಲ್ಲಿರುವ ದೇವನಹಳ್ಳಿಯ ಕೋಟೆ ಸರಕಾರಿ ಬಾಲಕರ ಹಿರಿಯ ಪ್ರಾಥಮಿಕ ಸರಕಾರಿ ಶಾಲೆಯಲ್ಲಿ ಕಟ್ಟಡದ ಕಿಟಕಿ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಬೆಂಗಳೂರಿನ ಹೊಸ್ಮಟ್ ಆಸ್ಪತ್ರೆಗೆ ಒಬ್ಬರು ದಾಖಲಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬೋರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮತ್ತೊಬ್ಬ ವಿದ್ಯಾರ್ಥಿಯನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ. ಗಾಯಾಳು ಮಕ್ಕಳ ಎಲ್ಲ ವೈದ್ಯಕೀಯ ವೆಚ್ಚವನ್ನು ಶಿಕ್ಷಣ ಇಲಾಖೆ ಭರಿಸುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.