ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಪಿ.ರಾಜೀವ್ ಸಹಿತ ಹಲವರ ವಿರುದ್ಧ ಎಫ್‍ಐಆರ್
Update: 2025-09-12 22:28 IST
ಬೆಂಗಳೂರು, ಸೆ.12: ಒಳ ಮೀಸಲಾತಿ ವಿಚಾರವಾಗಿ ನಡೆದಿದ್ದ ಪ್ರತಿಭಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪಿ.ರಾಜೀವ್ ಸಹಿತ ಹಲವರ ವಿರುದ್ಧ ಇಲ್ಲಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಸೆಪ್ಟೆಂಬರ್ 10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಒಳ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆದಿತ್ತು. ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಬ್ಯಾರಿಕೇಡ್‍ಗಳನ್ನು ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಸಾರ್ವಜನಿಕರ ವಾಹನ ಸಂಚಾರಕ್ಕೂ ಅಡ್ಡಿಯುಂಟಾಗಿತ್ತು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.