‘ಸಾಮಾಜಿಕ ಸಮೀಕ್ಷೆ’ ಆಶಾ ಕಾರ್ಯಕರ್ತೆಯರನ್ನು ಬಳಕೆ ಮಾಡಿಕೊಳ್ಳಲು ಸರಕಾರದ ಆದೇಶ
ಸಾಂದರ್ಭಿಕ ಚಿತ್ರ | PC : PTI
ಬೆಂಗಳೂರು, ಸೆ.17: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಸಮೀಕ್ಷೆ ನಡೆಸಿದ ಪ್ರತಿ ಆಶಾ ಕಾರ್ಯಕರ್ತೆಯರಿಗೆ 2ಸಾವಿರ ರೂ.ಗಳ ಗೌರವಧನವನ್ನು ನೀಡಲಾಗುತ್ತದೆ ಎಂದು ಸರಕಾರವು ಬುಧವಾರದಂದು ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆಯನ್ನು ಸೆ.22ರಿಂದ ಅ.10ರವರೆಗೆ ನಡೆಸಲಾಗುತ್ತಿದೆ. ಈ ಸಮೀಕ್ಷೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯದಲ್ಲಿ ಭಾಗವಹಿಸುವಂತೆ ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಆಶಾ ಕಾರ್ಯಕರ್ತೆಯರಿಗೆ ನಿರ್ದೇಶನ ನೀಡಬೇಕು ಎಂದು ತಿಳಿಸಿದೆ.
ಆಶಾ ಕಾರ್ಯಕರ್ತೆಯರು ಶೇ.90ರಷ್ಟು ಮನೆಗಳಿಗೆ ಭೇಟಿ ನೀಡಿ, ಜಾಗೃತಿ ಅಭಿಯಾನ ತಂತ್ರಾಂಶದ ಮೂಲಕ ಯುಎಚ್‍ಐಡಿ ನಂಬರ್ ಹಾಗೂ ಮೊಬೈಲ್ ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸುವ ಪ್ರತಿ ಆಶಾ ಕಾರ್ಯಕರ್ತೆಯರಿಗೆ 2 ಸಾವಿರ ರೂ.ಗಳ ಗೌರವಧನವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ಪಾವತಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.