ಜಾಲಿವುಡ್ ಸ್ಟುಡಿಯೊಸ್ ಬೀಗಮುದ್ರೆ ತೆರವಿಗೆ ವಿರೋಧ: ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ರಾಮನಗರ: ಜನಪ್ರಿಯ ‘ಬಿಗ್ ಬಾಸ್’ ರಿಯಾಲಿಟಿ ಶೋ ಮನೆ ಇರುವ ಬಿಡದಿಯ ಜಾಲಿವುಡ್ ಸ್ಟುಡಿಯೊಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್ ಗೆ ಜಿಲ್ಲಾಡಳಿತ ಹಾಕಿದ್ದ ಬೀಗಮುದ್ರೆಯನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಜಾಲಿವುಡ್ ಎದುರು ಗುರುವಾರ ಪ್ರತಿಭಟನೆ ನಡೆಸಿದರು
ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್ ಸ್ಟುಡಿಯೊಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್ ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದ ಮೇರೆಗೆ ಜಿಲ್ಲಾಡಳಿತ ಬೀಗ ಮುದ್ರೆ ಹಾಕಿತ್ತು. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆಯಂತೆ ಕಳೆದ ರಾತ್ರಿ ಜಿಲ್ಲಾಧಿಕಾರಿ ಬೀಗ ತೆರವುಗೊಳಿಸಿ, ಷೋ ನಡೆಯಲು ಅನುವು ಮಾಡಿಕೊಟ್ಟಿದ್ದಾರೆ. ಇದು ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರತಿಭಟನಾಕಾರರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾಡಳಿತ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೆಲವು ಪ್ರತಿಭಟನಾಕಾರರು ಘೋಷಣೆ ಕೂಗುತ್ತಾ ಏಕಾಏಕಿ ಜಾಲಿವುಡ್ ಒಳಕ್ಕೆ ಪ್ರವೇಶಿಸಿದರು. ಮಧ್ಯಪ್ರವೇಶಿಸಿಗ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು.