×
Ad

ಸಿಎಂ, ಡಿಸಿಎಂ ನಿವಾಸ ಸ್ಫೋಟಿಸುವುದಾಗಿ ಇ-ಮೇಲ್ ಬೆದರಿಕೆ; ಪ್ರಕರಣ ದಾಖಲು

Update: 2025-10-14 23:39 IST

ಬೆಂಗಳೂರು, ಅ. 14: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ

ಆರೋಪಿಯನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅ.11 ರಂದು ತಮಿಳುನಾಡು ಡಿಜಿಪಿಗೆ ನಿರ್ದಿಷ್ಟ ಐಡಿಯಿಂದ ಇಮೇಲ್‍ಗಳನ್ನು ಕಳುಹಿಸಲಾಗಿದೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‍ಎಸ್) ಸೆಕ್ಷನ್ 351(4) (ಕ್ರಿಮಿನಲ್ ಬೆದರಿಕೆ) ಮತ್ತು 353(1)(ಬಿ) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇ-ಮೇಲ್‍ನಲ್ಲಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರ ನಿವಾಸಗಳಲ್ಲಿ ನಾಲ್ಕು ಆರ್‍ಡಿಎಕ್ಸ್ ಹಾಗೂ ಸುಧಾರಿತ ಐಇಡಿಗಳನ್ನು ಇರಿಸಲಾಗಿದೆ. ಅವುಗಳನ್ನು ರಿಮೊಟ್ ಮೂಲಕ ಸ್ಫೋಟಿಸುವುದಾಗಿ ಎಂದು ಬೆದರಿಕೆ ಹಾಕಲಾಗಿತ್ತು. ಆನಂತರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಾಂಬ್ ಪತ್ತೆ ದಳ ಎರಡೂ ನಿವಾಸಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಆದರೆ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News