×
Ad

ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪ್ರಕರಣ ಪತ್ತೆ: ಶಬರಿಮಲೆ ಯಾತ್ರಿಕರಿಗೆ ಮಾರ್ಗಸೂಚಿ ಪ್ರಕಟ

Update: 2025-11-19 00:14 IST

ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು : ಕೇರಳ ರಾಜ್ಯದಲ್ಲಿ ‘ನೇಗ್ಲೇರಿಯಾ ಫೌಲೇರಿ’ (ಮಿದುಳು ತಿನ್ನುವ ಅಮೀಬಾ) ಜೀವಿಯಿಂದ ‘ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್’ ಪ್ರಕರಣಗಳು ಕಂಡುಬಂದಿದ್ದು, ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಇಲಾಖೆಯು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ನೇಗ್ಲೇರಿಯಾ ಫೌಲೆರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ, ಅದು ಮೆದುಳನ್ನು ತಲುಪುತ್ತದೆ. ಇದರಿಂದ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಎನ್ನುವ ಅಪರೂಪದ ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‍ಗಳನ್ನು ಬಳಸಿ ಅಥವಾ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸಬೇಕು. ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು, ವಾಕರಿಕೆ/ ವಾಂತಿ, ಕುತ್ತಿಗೆ ಬಿಗಿತ, ಗೊಂದಲ/ ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ ವೈದ್ಯರನ್ನು ಸಂಪರ್ಕಿಸಬೇಕು ಎಂದು ಆರೋಗ್ಯ ಇಲಾಖೆಯು ಹೇಳಿದೆ.

ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ನಿಂತ ನೀರು, ಕೊಳ, ಈಜುಕೊಳ, ಕೆರೆ ಸೇರಿದಂತೆ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಈ ಸೂಕ್ಷ್ಮಜೀವಿಯಿಂದ ಬರುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ ಎಂದು ಆರೋಗ್ಯ ಇಲಾಖೆಯು ಸ್ಪಷ್ಟಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News