×
Ad

ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಬೇಕು : ಸಿಎಂ ಸಿದ್ದರಾಮಯ್ಯ

Update: 2025-12-01 20:44 IST

ಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರಕಾರ ನಿಗದಿಪಡಿಸಿರುವ 2400ರೂ. ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಶು ಆಹಾರ ಮತ್ತು ಕುಕ್ಕುಟ ಆಹಾರ ಉತ್ಪಾದಕರ ಸಭೆ ನಡೆಸಿದ ಅವರು, ಕರ್ನಾಟಕ ಮಾರುಕಟ್ಟೆ ಫೆಡರೇಶನ್ ಮೂಲಕ ರೈತರಿಂದ ಮೆಕ್ಕೆಜೋಳ ಖರೀದಿಸಿ ಸರಬರಾಜು ಮಾಡಲಾಗುವುದು. ಸಾಗಾಣಿಕೆ ವೆಚ್ಚ, ಲೋಡಿಂಗ್, ಅನ್ಲೋಡಿಂಗ್ ವೆಚ್ಚವನ್ನು ಸರಕಾರವೆ ಭರಿಸಲಿದೆ. ಕುಕ್ಕುಟ ಉದ್ಯಮಕ್ಕೆ ಯಾವುದೇ ತೊಂದರೆಯಾಗದಂತೆ ರಾಜ್ಯ ಸರಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ಮಾರುಕಟ್ಟೆಯಲ್ಲಿ ಮೆಕ್ಕೆ ಜೋಳ ದರ ಕುಸಿದಿರುವುದರಿಂದ ರೈತರಿಗೆ ನೆರವಾಗುವ ಉದ್ದೇಶದಿಂದ ಸರಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಡಿಸ್ಟಿಲರಿಗಳು 7 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸುವ ಪ್ರಕ್ರಿಯೆಯನ್ನು ಈಗಾಗಲೆ ಪ್ರಾರಂಭಿಸಿದೆ. ಕೆಎಂಎಫ್ 50 ಸಾವಿರ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಗೆ ಚಾಲನೆ. ಇದೇ ರೀತಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದನಾ ವಲಯ 5 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಯನ್ನು ತಕ್ಷಣ ಪ್ರಾರಂಭಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು.

ರಾಜ್ಯದಲ್ಲಿ ಖಾರಿಫ್ ಹಂಗಾಮಿನಲ್ಲಿ 17.6 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದ್ದು, 53.8 ಲಕ್ಷ ಮೆಕ್ಕೆಜೋಳ ಉತ್ಪಾದನೆ ಅಂದಾಜಿಸಲಾಗಿದೆ. ಇದರಲ್ಲಿ ಶೇ.50-60ರಷ್ಟು ಮೆಕ್ಕೆಜೋಳವನ್ನು ಕೋಳಿ ಮತ್ತು ಪಶು ಆಹಾರಕ್ಕಾಗಿ ಉಪಯೋಗಿಸಲಾಗುತ್ತದೆ. ಪ್ರತಿವರ್ಷ ಅಂದಾಜು 25.89 ಲಕ್ಷ ಟನ್ ಮೆಕ್ಕೆಜೋಳವನ್ನು ಕೋಳಿ ಮತ್ತು ಪಶು ಆಹಾರಕ್ಕಾಗಿ ಉಪಯೋಗಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್, ಕೃಷಿ ಚಿವ ಎನ್.ಚಲುವರಾಯ ಸ್ವಾಮಿ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಝ್, ಪಶು ಆಹಾರ ಉತ್ಪಾದಕರ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News