×
Ad

ಇನಾಂ ವೀರಾಪುರ ಗ್ರಾಮಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್ ಭಟ್ ಭೇಟಿ

Update: 2026-01-06 21:38 IST

ಧಾರವಾಡ : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಮಂಗಳವಾರ ಬೆಳಗ್ಗೆ ಇನಾಂ ವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ದಲಿತ ಕುಟುಂಬದ ಮೇಲೆ ಆಗಿರುವ ದೌರ್ಜನ್ಯ ಪ್ರಕರಣದ ಹಿನ್ನಲೆಯಲ್ಲಿ ವಾಸ್ತವಿಕ ಪರಿಸ್ಥಿತಿಯನ್ನು ಅವಲೋಕಿಸಿದರು.

ದಲಿತ ಕುಟುಂಬಗಳು ವಾಸಿಸುವ ಓಣಿ ಹಾಗೂ ದೌರ್ಜನ್ಯಕ್ಕೆ ಒಳಗಾದ ವಿವೇಕಾನಂದ ಅವರ ಮನೆ ಹಾಗೂ ದೌರ್ಜನ್ಯ ಮತ್ತು ಕೊಲೆ ಕೃತ್ಯ ನಡೆದ ಸ್ಥಳ ಪರಿಶೀಲಿಸಿ, ಸ್ಥಳೀಯ ನಿವಾಸಿಗಳಿಂದ, ಪೊಲೀಸ್ ಅಧಿಕಾರಿಗಳಿಂದ ಹಾಗೂ ಇತರರಿಂದ ವಿವರವಾದ ಮಾಹಿತಿಯನ್ನು ಅವರು ಪಡೆದುಕೊಂಡರು.

ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಯೋಗದಿಂದ ಸರಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಮತ್ತು ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಶ್ಯಾಮ್ ಭಟ್ ಹೇಳಿದರು.

ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಸಂಯುಕ್ತವಾಗಿ ಜಿಲ್ಲೆಯಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಅಧಿಕಾರಿಗಳಿಗೆ ಸೂಚಿಸಿದ ಅವರು, ಮಾನವ ಹಕ್ಕುಗಳ ಉಲ್ಲಂಘನೆಗಳಿಗೆ ಅವಕಾಶವಿಲ್ಲ ಎಂಬುದನ್ನು ಎಲ್ಲರೂ ಮನಗಂಡು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ದಲಿತ ಕುಟುಂಬಗಳಿಗೆ ಅಗತ್ಯ ಭದ್ರತೆ ಒದಗಿಸುವುದು. ಸರಕಾರದ ವಿವಿಧ ಕಲ್ಯಾಣ ಯೋಜನೆಗಳ ಸದುಪಯೋಗ ದೊರಕುವಂತೆ ನೋಡಿಕೊಳ್ಳುವುದು ಹಾಗೂ ಘಟನೆಗೆ ಸಂಬಂಧಿಸಿದಂತೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಶ್ಯಾಮ್ ಭಟ್ ತಿಳಿಸಿದರು.

ಮುಂಬರುವ ದಿನಗಳಲ್ಲಿಯೂ ಗ್ರಾಮಗಳಲ್ಲಿ ಶಾಂತಿ ಸಭೆಗಳನ್ನು ಜರುಗಿಸಿ, ಜನರಲ್ಲಿನ ಭಯವನ್ನು ದೂರ ಮಾಡಿ, ವಿಶ್ವಾಸದ ವಾತಾವರಣ ನಿರ್ಮಿಸುವಂತೆ ಪೊಲೀಸ್ ಇಲಾಖೆಗೆ ಮತ್ತು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ ಅವರು, ಮಾನಸಿಕ ಧೈರ್ಯ, ಕಾನೂನು ಸಹಾಯ ಹಾಗೂ ಅಗತ್ಯ ಪರಿಹಾರ ಕಲ್ಪಿಸುವ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ನಿರ್ದೇಶನವನ್ನು ನೀಡಿದರು.

ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮಾತನಾಡಿ, ಜಿಲ್ಲಾಡಳಿತದಿಂದ ಈಗಾಗಲೆ ಸರಕಾರಕ್ಕೆ ಇನಾಂವೀರಾಪುರ ಗ್ರಾಮದ ಪ್ರಕರಣದ ಕುರಿತು ತನಿಖೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಲು, ದೌರ್ಜನ್ಯಕ್ಕೆ ಒಳಗಾದ ಕುಟುಂಬದ ಪರವಾಗಿ ವಿಶೇಷ ಅಭಿಯೋಜಕರನ್ನು ನೇಮಿಸಲು ಮತ್ತು ಸದರಿ ಕುಟುಂಬಕ್ಕೆ ವಿಶೇಷ ಪರಿಹಾರ ನೀಡುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ ಪ್ರಸ್ತಾವನೆ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ ಎಂದು ಹೇಳಿದರು.

ಈಗಾಗಲೇ ಜಿಲ್ಲಾಡಳಿತದಿಂದ ಗ್ರಾಮದಲ್ಲಿ ಶಾಂತಿ ಸಭೆಯನ್ನು ಜರುಗಿಸಲಾಗಿದ್ದು, ಗ್ರಾಮದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಿ ಪರಸ್ಪರ ಸಹೋದರತ್ವ ಮತ್ತು ವಿಶ್ವಾಸದಿಂದ ಬದುಕುವುದಾಗಿ ಗ್ರಾಮಸ್ಥರು ಭರವಸೆ ನೀಡಿದ್ದಾರೆ. ಸ್ಥಳೀಯ ನಿವಾಸಿಗಳ ಸಲಹೆಗಳನ್ನು ಆಲಿಸಲಾಗಿದೆ. ಗ್ರಾಮ ಸಭೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ಹಾಗೂ ಯಾವುದೇ ರೀತಿಯ ತಪ್ಪು ಮಾಹಿತಿ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಗ್ರಾಮದಲ್ಲಿ ಶಾಂತಿ ಸಭೆ ಮೂಲಕ ಗ್ರಾಮದ ಸಾರ್ವಜನಿಕರ ಭಯ ಮತ್ತು ಆತಂಕವನ್ನು ದೂರ ಮಾಡಿ, ಕಾನೂನು ಮತ್ತು ಆಡಳಿತದ ಮೇಲೆ ವಿಶ್ವಾಸ ಮೂಡಿಸುವ ಪ್ರಯತ್ನ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಹ ಅಗತ್ಯವಿದ್ದರೆ ಮತ್ತಷ್ಟು ಶಾಂತಿ, ಸೌಹಾರ್ದತೆಯ ಸಭೆಗಳನ್ನು ಆಯೋಜಿಸಿ, ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ.ವಂಟಿಗೊಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಡಿವೈಎಸ್‍ಪಿ ವಿನೋದ್ ಮುಕ್ತೆದಾರ, ತಹಶೀಲ್ದಾರ್ ಜಿ.ಆರ್.ಮಜ್ಜಗಿ, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟರ್ ಮುರಗೇಶ ಚನ್ನಣ್ಣನವರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭಾ, ಸಹಾಯಕ ನಿರ್ದೇಶಕಿ ಪ್ರೀಯದರ್ಶಿನಿ ಹಿರೇಮಠ, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅತೀಕಾ ಸಿದ್ದಿ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವೇಕಾನಂದ ದೊಡಮನಿ ಕುಟುಂಬದ ಸದಸ್ಯರು ಹಾಗೂ ಇತರರು ಇದ್ದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ:

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಅವರು ಹುಬ್ಬಳ್ಳಿ ತಾಲೂಕಿನ ಇನಾಂವೀರಾಪೂರ ಗ್ರಾಮದ ದಲಿತ ದೌರ್ಜನ್ಯ ಪೀಡಿತ ಕುಟುಂಬ ಸದಸ್ಯರ ಭೇಟಿ ಮತ್ತು ಗ್ರಾಮದಲ್ಲಿನ ವಾಸ್ತವಿಕ ಪರಿಸ್ಥಿತಿಯ ಅಧ್ಯಯನದ ನಂತರ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News