×
Ad

ಬೆಂಗಳೂರು: ಕೇಂದ್ರದ ʼವಿಬಿ-ಜಿ ರಾಮ್ ಜಿʼ ಯೋಜನೆ ವಿರುದ್ಧ ಭಾರೀ ಪ್ರತಿಭಟನೆ

ಸಿಎಂ–ಡಿಸಿಎಂ ಸೇರಿ ಕಾಂಗ್ರೆಸ್ ನಾಯಕರಿಂದ ತೀವ್ರ ಆಕ್ರೋಶ

Update: 2026-01-27 14:17 IST

ಬೆಂಗಳೂರು, ಜ.27: ಕೇಂದ್ರ ಸರ್ಕಾರದ ‘ವಿಬಿ-ಜಿ ರಾಮ್ ಜಿ’ ಯೋಜನೆಯನ್ನು ರದ್ದುಪಡಿಸಿ ನರೇಗಾ ಯೋಜನೆಯನ್ನು ಮರುಜಾರಿಗೆ ತರಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ವತಿಯಿಂದ ಆಯೋಜಿಸಲಾದ ಈ ಪ್ರತಿಭಟನಾ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಸಚಿವರಾದ ಕೆ.ಜೆ. ಜಾರ್ಜ್, ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಎಐಸಿಸಿ ಕಾರ್ಯದರ್ಶಿ ಬಿ.ವಿ. ಶ್ರೀನಿವಾಸ್ ಸೇರಿದಂತೆ ಹಲವುಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

 ‘ವಿಬಿ-ಜಿ ರಾಮ್ ಜಿ’ಯ ಮೂಲಕ ಗ್ರಾಮ ಪಂಚಾಯತ್‌ಗಳ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ. ಕೃಷಿ ಚಟುವಟಿಕೆ ಸಮಯದಲ್ಲಿ ಮಾತ್ರ ಸೀಮಿತ ಉದ್ಯೋಗ ನೀಡಲಾಗುತ್ತಿದೆ. ಇದು ಮಹಾತ್ಮಾ ಗಾಂಧಿ ವಿಚಾರಧಾರೆಗೆ ಧಕ್ಕೆ ತರುವ ಕ್ರಮ. ನಾವು ಎಚ್ಚೆತ್ತುಕೊಳ್ಳದಿದ್ದರೆ ಸಂವಿಧಾನವನ್ನೇ ಮುಗಿಸುವ ಅಪಾಯವಿದೆ ಎಂದು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕರು ಆರೋಪಿಸಿದರು.

ಕಾಂಗ್ರೆಸ್ ಅವಧಿಯಲ್ಲಿನ ಎಲ್ಲ ಯೋಜನೆಗಳ ಹೆಸರುಗಳನ್ನು ಬದಲಾವಣೆ ಮಾಡಲಾಗಿದೆ. ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ರೈತರ ಬಗ್ಗೆ ಮಾತನಾಡಿಲ್ಲ. ಇದು ರೈತ ವಿರೋಧಿ ನಿಲುವು. ಮಹಾತ್ಮಾ ಗಾಂಧಿ ವಿರುದ್ಧ ದೇವರನ್ನು ನಿಲ್ಲಿಸುವ ಪ್ರಯತ್ನ ಬಿಜೆಪಿ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದರು.

ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಯುಪಿಎ ಸರ್ಕಾರ 2005ರಲ್ಲಿ ರಾಷ್ಟ್ರದಲ್ಲಿದ್ದ ನಿರುದ್ಯೋಗ ಸಮಸ್ಯೆ ನಿವಾರಣೆಗೆ ನರೇಗಾ ಯೋಜನೆಯನ್ನು ಜಾರಿಗೆ ತಂದಿತ್ತು. ಆ ಕಾಲದಲ್ಲಿ ಲಕ್ಷಾಂತರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಈ ಕಾನೂನು ಜಾರಿಗೆ ತರಲಾಗಿತ್ತು. 20 ವರ್ಷಗಳ ಕಾಲ ಗ್ರಾಮೀಣ ಕೃಷಿ ಕಾರ್ಮಿಕರಿಗೆ ಉದ್ಯೋಗದ ಹಕ್ಕು ಸಿಗುವಂತಾಯಿತು ಎಂದು ವಿವರಿಸಿದರು.

ನರೇಗಾ ಕಾನೂನಿನಡಿ ವರ್ಷಕ್ಕೆ 100 ದಿನಗಳ ಉದ್ಯೋಗ ಅವಕಾಶವಿದ್ದು, ಉದ್ಯೋಗ ನೀಡದಿದ್ದಲ್ಲಿ ನಿರುದ್ಯೋಗ ಭತ್ಯೆ ನೀಡುವ ವ್ಯವಸ್ಥೆಯೂ ಇತ್ತು. ಪಂಚಾಯತ್‌ಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿತ್ತು. ಯೋಜನೆಗೆ 90 ಶೇಕಡಾ ಅನುದಾನವನ್ನು ಕೇಂದ್ರ ಸರ್ಕಾರವೇ ನೀಡುತ್ತಿತ್ತು. ಆದರೆ ಈಗ 100 ದಿನಗಳ ಬದಲಾಗಿ 125 ದಿನ ಎಂದು ಹೇಳುತ್ತಿರುವುದು ಕಣ್ಣೊರೆಸುವ ತಂತ್ರ. ಉದ್ಯೋಗ ನೀಡುವ ಹೊಣೆಗಾರಿಕೆಯಿಂದ ಕೇಂದ್ರ ಸರ್ಕಾರ ತಪ್ಪಿಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಎಂಬಿ ಪಾಟೀಲ್ ಮಾತನಾಡಿ, ನರೇಗಾ ನಿಷ್ಕ್ರಿಯಗೊಳಿಸುವ ಮೂಲಕ ಕೇಂದ್ರ ಸರ್ಕಾರ ಗ್ರಾಮೀಣ ಜನರಿಗೆ ಅನ್ಯಾಯ ಮಾಡಿದೆ. ಸ್ಥಳೀಯವಾಗಿ ಉದ್ಯೋಗ ಸಿಗಬೇಕೆಂಬ ಉದ್ದೇಶದಿಂದಲೇ ಈ ಯೋಜನೆ ಜಾರಿಯಾಗಿತ್ತು. ನರೇಗಾ ರದ್ದುಪಡಿಸಿ ಜಿ–ರಾಮ್–ಜಿ ತಂದಿರುವುದು ಗ್ರಾಮೀಣ ಅಭಿವೃದ್ಧಿಗೆ ತೀವ್ರ ಹಿನ್ನಡೆ ಎಂದು ಹೇಳಿದರು.

ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಕಳೆದ 11 ವರ್ಷಗಳಲ್ಲಿ ಯಾವುದೇ ಹೊಸ ಜನಪರ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಜನರನ್ನು ವಿಭಜಿಸಲಾಗುತ್ತಿದೆ. ಮಹಾತ್ಮಾ ಗಾಂಧಿ ಹೆಸರನ್ನು ಬದಲಿಸುವುದನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News