ಜೀವ ಬೆದರಿಕೆ ಆರೋಪ; ತಿಮರೋಡಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ
ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ಅವರ ಬೆಂಬಲಿಗರು ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಹಾಗೂ ಸುಳ್ಳು ಸಾಕ್ಷ್ಯ ನೀಡುವಂತೆ ಒತ್ತಾಯಿಸಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ತಿಮರೋಡಿ ವಿರುದ್ಧ ಜೂನ್ 8 ರವರೆಗೆ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಪುತ್ತೂರು ಗ್ರಾಮೀಣ ಠಾಣೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಪುತ್ತೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತದರ ಸಂಬಂಧಿತ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಾಲ್ ಅವರಿದ್ದ ರಜಾಕಾಲದ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿದೆ.
ವಿಚಾರಣೆ ವೇಳೆ ತಿಮರೋಡಿ ಪರ ವಕೀಲ ಎಂ.ಆರ್. ಬಾಲಕೃಷ್ಣ ವಾದ ಮಂಡಿಸಿ, ಪ್ರಕರಣಕ್ಕೂ ಅರ್ಜಿದಾರರಿಗೂ ಯಾವುದೇ ಸಂಬಂಧವಿಲ್ಲ. ಕೇವಲ ಅರ್ಜಿದಾರರಿಗೆ ಕಿರುಕುಳ ನೀಡಲು ಈ ದೂರು ದಾಖಲಿಸಲಾಗಿದೆ ಎಂದು ಆಕ್ಷೇಪಿಸಿದರು.
ದೂರುದಾರ ಸುಂದರ ರೈ ಮಂದಾರ ಪರ ವಕೀಲರು, ಸತೀಶ್ ಕುಮಾರ್ ರೈ ಅವರು ದೂರುದಾರಿಗೆ ಕರೆ ಮಾಡಿ ಬೆದರಿಕೆ ಹಾಕಿರುವ ಸಂಬಂಧ ಅವರ ಫೋನ್ ಸಂಭಾಷಣೆಯ ಪ್ರತಿಲಿಪಿ (ಟ್ರಾನ್ಸ್‌ಕ್ರಿಪ್ಷನ್) ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿದರು.
ಅದಕ್ಕೆ ಅನುಮತಿಸಿದ ಹೈಕೋರ್ಟ್, ಅರ್ಜಿಯ ಮುಂದಿನ ವಿಚಾರಣೆವರೆಗೆ ತಿಮರೋಡಿ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಪುತ್ತೂರು ಠಾಣೆ ಪೊಲೀಸರಿಗೆ ಸೂಚಿಸಿ, ಅರ್ಜಿ ವಿಚಾರಣೆಯನ್ನು ಜೂನ್ 8ಕ್ಕೆ ಮುಂದೂಡಿತು.