×
Ad

ನೂತನ ಮುಖ್ಯಮಂತ್ರಿ, ಸಚಿವರ ಪ್ರಮಾಣ ವಚನ; ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ‘ಕೈ ಕಾರ್ಯಕರ್ತರ ಸಂಭ್ರಮ’

Update: 2026-06-04 01:08 IST

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಡಿಕೆಶಿ ಅವರ ಅಭಿಮಾನಿಗಳು ಜೈಕಾರಗಳನ್ನು ಕೂಗಿ, ಸಿಹಿ ಹಂಚಿ ಸಂಭ್ರಮಿಸಿದರು.

ಬುಧವಾರ ಮಧ್ಯಾಹ್ನದಿಂದಲೇ ವಿವಿಧ ಕಡೆಗಳಿಂದ ಬೆಂಗಳೂರಿನ ವಿಧಾನಸೌಧ, ಲೋಕಭವನ, ಕ್ವೀನ್ಸ್‍ರಸ್ತೆ ಬಳಿ ಜಮಾಯಿಸಿದ ಸಾವಿರಾರರು ಕಾಂಗ್ರೆಸ್ ಕಾರ್ಯಕರ್ತರು, ಅವರ ಅಭಿಮಾನಿಗಳು, ಪ್ರಮಾಣ ವಚನ ಸ್ವೀಕಾರದ ಕಾರ್ಯಕ್ರಮವನ್ನು ಎಲ್‍ಇಡಿ ಪರದೆ ಮೇಲೆ ವೀಕ್ಷಿಸಿ ಕಣ್ತುಂಬಿಕೊಂಡರು.

ಇತ್ತ ಲೋಕಭವನದ ಸುತ್ತಲೂ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ನಾಯಕರನ್ನು ಒಳಗೊಂಡ ಕಾಂಗ್ರೆಸ್ ಪಕ್ಷದ ಧ್ವಜಗಳು ಮತ್ತು ದೊಡ್ಡ ಬ್ಯಾನರ್‍ಗಳನ್ನು ಭಾರೀ ಸಂಖ್ಯೆಯಲ್ಲಿ ಅಳವಡಿಸಲಾಗಿತ್ತು.

ಅದೇ ರೀತಿ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಬೆಳಗಾವಿ, ಮಂಗಳೂರು, ಉಡುಪಿ, ಹಾಸನ, ಮಂಡ್ಯ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಕೇಂದ್ರಗಳಲ್ಲೂ ಎಲ್‍ಇಡಿ ಪರದೆ ಮೇಲೆ ಪ್ರಮಾಣ ವಚನ ಕಾರ್ಯಕ್ರಮವನ್ನು ಸಾವಿರಾರು ಸಂಖ್ಯೆಯಲ್ಲಿ ಜನರು ವೀಕ್ಷಣೆ ಮಾಡಿ, ಡಿ.ಕೆ. ಶಿವಕುಮಾರ್ ಅವರಿಗೆ ಶುಭ ಹಾರೈಸಿದರು.

230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡಿದ ದೃಶ್ಯ ಕಂಡಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ‘ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್’ ಸಂಸ್ಥೆಯ ಸಹಯೋಗದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ರಾಜ್ಯಾದ್ಯಂತ ಇರುವ ಪ್ರಮುಖ 230 ಸರಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಪರದೆಗಳ ಮೂಲಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂಪೂರ್ಣ ಕಾರ್ಯಕ್ರಮ ನೇರ ಪ್ರಸಾರ ಮಾಡಲಾಯಿತು.

ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಸಾಮಾನ್ಯ ಜನರು ಈ ಐತಿಹಾಸಿಕ ಸಮಾರಂಭದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಕೈಗೊಳ್ಳಲಾಗಿತ್ತು. ಇದರಿಂದಾಗಿ ಸಾರ್ವಜನಿಕರು ತಮ್ಮ ಹತ್ತಿರದ ಬಸ್ ನಿಲ್ದಾಣಗಳಲ್ಲೇ ನಿಂತು ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನೋಡಿದರು.

  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News