ಉದ್ಯಮ ಸಾಲ ಪಡೆದು ಬ್ರಾಹ್ಮಣರು ಮುಂದೆ ಬರಬೇಕು : ಡಾ.ಜಿ.ಪರಮೇಶ್ವರ್

Update: 2026-07-22 00:48 IST

ಬೆಂಗಳೂರು : ರಾಜ್ಯ ಸರಕಾರ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ ಜಾರಿಗೆ ತಂದಿದ್ದು, ಅದರ ಅನ್ವಯ ಅರ್ಹ ಬ್ರಾಹ್ಮಣರು ಈ ಯೋಜನೆ ಸದುಪಯೋಗಪಡಿಸಿಕೊಂಡು ಮುಂದೆ ಬರಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಯೋಜನೆಗಳ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಮತ್ತು ಇನ್ನಿತರ ಯೋಜನೆಗಳನ್ನು ರೂಪಿಸಿ, ಬ್ರಾಹ್ಮಣ ಸಮುದಾಯದ ಬಡವರ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗಿದೆ ಎಂದರು.

2026-27ನೆ ಸಾಲಿನಲ್ಲಿ ನೂತನವಾಗಿ ‘ವಿಪ್ರ ಸ್ವ ಉದ್ಯಮ ನೇರ ಸಾಲ' ಯೋಜನೆಯನ್ನು ಮಂಡಳಿಯ ವತಿಯಿಂದ ಪ್ರಾರಂಭಿಸಿ, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಹಸು ಸಾಕಾಣಿಕೆಯಂತಹ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ನೀಡಲಾಗಿದೆ. ಈ ಯೋಜನೆಯ ಅಡಿಯಲ್ಲಿ ಕನಿಷ್ಠ 1 ಲಕ್ಷ ರೂ., ಹಾಗೂ ಗರಿಷ್ಠ 2 ಲಕ್ಷ ರೂ.,ಸಾಲ-ಸಹಾಯಧನ ನೀಡಲಾಗುವುದು. ಹೀಗಾಗಿ, ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದಲ್ಲಿ ಹಿಂದುಳಿದವರು ಈ ಸಾಲ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಹೇಳಿದರು.

2026-27ನೆ ಸಾಲಿನ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ಗೆ ಅರ್ಜಿ ಆಹ್ವಾನಿಸಿದ್ದು, ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಎಂದೂ ಅವರು ಮಾಹಿತಿ ನೀಡಿದರು. ಈ ವೇಳೆ ಕಂದಾಯ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು, ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ ಹಾಗೂ ಮಂಡಳಿಯ ನಿರ್ದೇಶಕರುಗಳು ಉಪಸ್ಥಿತರಿದ್ದರು.

 

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News