ನಿಗದಿತ ಅವಧಿಯೊಳಗೆ ಎಸ್‍ಐಆರ್ ಕಾರ್ಯ ಪಾರದರ್ಶಕತೆಯಿಂದ ಪೂರ್ಣಗೊಳಿಸಿ : ಮುಖ್ಯ ಚುನಾವಣಾಧಿಕಾರಿ ಸೂಚನೆ
ಬೆಂಗಳೂರು : ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ(ಎಸ್‍ಐಆರ್)ಕಾರ್ಯವನ್ನು ಚುನಾವಣಾ ಆಯೋಗ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ಪಾರದರ್ಶಕತೆಯಿಂದ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಸೂಚನೆ ನೀಡಿದ್ದಾರೆ.
ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಆಯುಕ್ತರ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ವಿಧಾನಸಭಾ ಕ್ಷೇತ್ರವಾರು ಎಸ್‍ಐಆರ್ ಪ್ರಗತಿ ಪರಿಶೀಲನೆ ಮಾಡಿ, ಎಲ್ಲಾ ವಿಧಾನಸಭಾ ಕ್ಷೇತ್ರದ ಪ್ರತಿ ಪೋಲಿಂಗ್ ಸ್ಟೇಷನ್ ವಾರು ಪ್ರಗತಿ ಪರಿಶೀಲಿಸುವುದಾಗಿ, ಸಾರ್ವಜನಿಕರಿಗೆ ಯಾವುದೇ ಅನಾನುಕೂಲವಾಗದಂತೆ ಹಾಗೂ ಯಾವುದೇ ನೈಜ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕತೆಯಿಂದ ನಿಗದಿತ ಅವಧಿಯಲ್ಲಿ ಗುರಿ ತಲುಪಲು ಕ್ರಮ ಕೈಗೊಳ್ಳಲು ಅನ್ಬುಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮತದಾರರ ನೋಂದಣಾಧಿಕಾರಿಗಳಿಗೆ ವಿಧಾನಸಭಾ ಕ್ಷೇತ್ರವಾರು ಗುರುತಿಸಲಾದ ಎಎಸ್‍ಡಿಡಿಒ ಪಟ್ಟಿಯ ವಿವರವನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಪ್ರತಿನಿತ್ಯ ನೀಡಿ, ಸದರಿಯವರು ಏನಾದರೂ ಆಕ್ಷೇಪಣೆ/ ಸಲಹೆಗಳನ್ನು ನೀಡಿದಲ್ಲಿ, ಪರಿಶೀಲಿಸಿ ನಿಯಮಾನುಸಾರ ಕ್ರಮ ವಹಿಸಲು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಕ್ಷೇತ್ರವಾರು ಸಭೆ ನಡೆಸಲು ಮತದಾರರ ನೋಂದಣಾಧಿಕಾರಿಗಳಿಗೆ ಅನ್ಬುಕುಮಾರ್ ಸೂಚನೆ ನೀಡಿದರು.
ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ಕಾರ್ಯವನ್ನು ನಿಗಧಿತ ಗುರಿಯೊಂದಿಗೆ ಸಮರ್ಪಕವಾಗಿ ನಿರ್ವಹಿಸುವುದು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಅನ್ಬುಕುಮಾರ್ ಅಗತ್ಯ ಸೂಚನೆಗಳನ್ನು ನೀಡಿದರು.
ಅಲ್ಲದೆ, ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಕಾರ್ಯವನ್ನು ಸುಗಮ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಅನ್ಬುಕುಮಾರ್ ನಿರ್ದೇಶನ ನೀಡಿದರು.
ಈ ಸಭೆಯಲ್ಲಿ ಜಂಟಿ ಮುಖ್ಯ ಚುನಾವಣಾಧಿಕಾರಿ ಯೋಗೇಶ್ವರ್, ಪಾಲಿಕೆಯ ಅಪರ ಆಯುಕ್ತರು(ಕಂದಾಯ ಪ್ರಭಾರ) ಹಾಗೂ ಜಂಟಿ ಆಯುಕ್ತೆ ಪಲ್ಲವಿ, ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿನ್, ಮತದಾರ ನೋಂದಣಾಧಿಕಾರಿಗಳು, ಸಹಾಯಕ ಚುನಾವಣಾ ನೋಂದಣಾಧಿಕಾರಿಗಳು ಹಾಗೂ ಸಂಬಂಧಿತ ಅಧಿಕಾರಿಗಳು ಹಾಜರಿದ್ದರು.