ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡದಿರುವುದು ಖಂಡನೀಯ : ಜನವಾದಿ
ಸಚಿವ ಸಂಪುಟ
ಬೆಂಗಳೂರು : ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡದಿರುವುದನ್ನು ಜನವಾದಿ ಮಹಿಳಾ ಸಂಘಟನೆ ಖಂಡಿಸಿದೆ.
ಬುಧವಾರ ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ಅಧ್ಯಕ್ಷೆ ಚಂದ್ರಕುಮಾರಿ ಹಾಗೂ ಪ್ರಧಾನ ಕಾರ್ಯದರ್ಶಿ ದೇವಿ, ಮಹಿಳೆಯರೇ ಇಲ್ಲದ ಸಂಪುಟದ ರಚನೆ ಮಹಿಳಾ ವಿರೋಧಿ ಮನೋಭಾವವನ್ನಷ್ಟೇ ಅಲ್ಲ. ಸಂವಿಧಾನಬದ್ಧ ಸಮಾನತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಒಟ್ಟು ಮತದಾರರಲ್ಲಿ ಶೇ.52ರಷ್ಟು ಮಹಿಳೆಯರಿದ್ದಾರೆ. ಚುನಾವಣೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ಸರಕಾರಗಳ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ, ಆಹಾರ ಭದ್ರತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸೇರಿದಂತೆ ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಕೊಡುಗೆ ಮಹತ್ವದ್ದಾಗಿದೆ. ಇಂತಹ ಸಂದರ್ಭದಲ್ಲಿ ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗೂ ಅವಕಾಶ ನೀಡದಿರುವುದು ಮಹಿಳೆಯರ ಸಾಮರ್ಥ್ಯ ವನ್ನು ಕಡೆಗಣಿಸುವುದಲ್ಲದೆ, ರಾಜಕೀಯ ನಿರ್ಧಾರ ಪ್ರಕ್ರಿಯೆಯಿಂದ ಅವರನ್ನು ಉದ್ದೇಶಪೂರ್ವಕವಾಗಿ ಹೊರಗಿಡುವ ಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ.
ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕೆಂದು ದೇಶಾದ್ಯಂತ ಮಹಿಳಾ ಸಂಘಟನೆಗಳು ನಿರಂತರ ಹೋರಾಟ ನಡೆಸುತ್ತಿರುವ ಈ ಸಂದರ್ಭದಲ್ಲಿ, ಕರ್ನಾಟಕ ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗೂ ಸ್ಥಾನ ನೀಡದಿರುವುದು ಮಹಿಳಾ ರಾಜಕೀಯ ಸಬಲೀಕರಣಕ್ಕೆ ವಿರುದ್ಧವಾದ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.