ಐಎಎಸ್ ಅಧಿಕಾರಿ ಕೆ.ಶ್ರೀನಿವಾಸರನ್ನು ಅಮಾನತುಗೊಳಿಸಿ : ನೈಜ ಹೋರಾಟಗಾರರ ವೇದಿಕೆ
ಬೆಂಗಳೂರು : ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತ ಕೆ.ಶ್ರೀನಿವಾಸ ಅವರನ್ನು ಅಮಾನತುಗೊಳಿಸಿ ಎಂದು ನೈಜ ಹೋರಾಟಗಾರರ ವೇದಿಕೆ ಒತ್ತಾಯಿಸಿದೆ.
ಶನಿವಾರ ಈ ಕುರಿತು ಆರೋಗ್ಯ ಸಚಿವ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿರುವ ವೇದಿಕೆಯ ಎಚ್.ಎಂ.ವೆಂಕಟೇಶ್, ಹಿಂದೆ ತುಮಕೂರು ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಕೆ.ಶ್ರೀನಿವಾಸ್ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿ ನಿಲಯದಲ್ಲಿ ರಾತ್ರಿ ಹೊತ್ತು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿ, ಅಸಭ್ಯವಾಗಿ ಹಾಡುಗಳಿಗೆ ನೃತ್ಯ ಮಾಡಿದ್ದು, ಅದರ ವಿರುದ್ಧ ವೇದಿಕೆಯು ಮುಖ್ಯಮಂತ್ರಿ, ಸಮಾಜ ಕಲ್ಯಾಣ ಇಲಾಖೆ ಸಚಿವರು, ಕಂದಾಯ ಸಚಿವರು, ಮುಖ್ಯ ಕಾರ್ಯದರ್ಶಿ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರನ್ನು ಸಲ್ಲಿಸಿತ್ತು ಎಂದು ತಿಳಿಸಿದ್ದಾರೆ.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಶ್ರೀನಿವಾಸ್ ಅವರು ತಮ್ಮ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ರಾಜ್ಯ ಮಹಿಳಾ ಆಯೋಗಕ್ಕೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರೇ ದೂರು ನೀಡಿದ್ದಾರೆ. ಇಂತಹವರಿಂದ ಆರೋಗ್ಯ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಆದುದರಿಂದ ಅವರನ್ನು ಅಮಾನತುಗೊಳಿಸಬೇಕು ಎಂದು ತಿಳಿಸಿದ್ದಾರೆ.