ಸಾಂದರ್ಭಿಕ ಚಿತ್ರ

ಬೆಂಗಳೂರು : ನಗರದ ಸಾರ್ವಜನಿಕ ಸ್ಥಳಗಳಲ್ಲಿ ಕೆಲ ತೃತೀಯಲಿಂಗಿಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ, ವಾಹನ ಸಂಚಾರಕ್ಕೆ ಅಡ್ಡಿಪಡಿಸುವುದು ಹಾಗೂ ಬಲವಂತದ ಹಣ ವಸೂಲಿಯಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಇತ್ತೀಚೆಗೆ ನಗರದ ಟ್ರಾಫಿಕ್ ಸಿಗ್ನಲ್‍ಗಳು, ಮಾರುಕಟ್ಟ್ಟೆಗಳು, ಬಸ್ ಹಾಗೂ ರೈಲ್ವೇ ನಿಲ್ದಾಣಗಳು ಮತ್ತು ಸಮಾರಂಭ ನಡೆಯುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದವು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತರು, ಇಂತಹ ಅಕ್ರಮ ಚಟುವಟಿಕೆಗಳನ್ನು ತಕ್ಷಣವೇ ನಿಯಂತ್ರಿಸಲು ಎಲ್ಲ ಪೊಲೀಸ್ ಠಾಣೆಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಆಕ್ರಮಣಕಾರಿ ರೀತಿಯಲ್ಲಿ ಭಿಕ್ಷೆ ಬೇಡುವುದು, ಬೆದರಿಕೆ ಹಾಕುವುದು ಅಥವಾ ಕಿರುಕುಳ ನೀಡುವುದು ಕಂಡುಬಂದಲ್ಲಿ ಸ್ಥಳೀಯ ಪೊಲೀಸರು ತಕ್ಷಣವೇ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಿದ್ದ ರೆ. ಅಲ್ಲದೆ, ಪದೇ ಪದೇ ದೂರುಗಳು ಬರುವ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಗಸ್ತು ಹೆಚ್ಚಿಸಲು ಹಾಗೂ ತೃತೀಯಲಿಂಗಿ ಸಮುದಾಯದವರೊಂದಿಗೆ ಸಭೆ ನಡೆಸಿ ಜಾಗೃತಿ ಮೂಡಿಸಲು ಸೂಚಿಸಲಾಗಿದೆ.

ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಜೊತೆಗೆ ತೃತೀಯಲಿಂಗಿ ವ್ಯಕ್ತಿಗಳ ಕಾನೂನುಬದ್ಧ ಹಕ್ಕುಗಳು ಹಾಗೂ ಘನತೆಗೆ ಯಾವುದೇ ಧಕ್ಕೆಯಾಗದಂತೆ ಎಚ್ಚರ ವಹಿಸಬೇಕು. ಹಾಗೆಯೇ ಅವರೊಂದಿಗೆ ತಾರತಮ್ಯವಿಲ್ಲದೆ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

ಸಾರ್ವಜನಿಕರು ಇಂತಹ ಘಟನೆಗಳು ನಡೆದಾಗ ಆತಂಕ ಪಡದೆ ತಕ್ಷ ಣವೇ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor