ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲು ಆಗ್ರಹ : ಮೇ 12ಕ್ಕೆ ಪ್ರತಿಭಟನೆಗೆ ಸಿಐಟಿಯು ಕರೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಮೇ 9 : ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿ ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಕೂಡಲೇ ಹಿಂಪಡೆಯಲು ಆಗ್ರಹಿಸಿ ಮೇ 12ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, ಕೆಲಸದ ಸ್ಥಳಗಳಲ್ಲಿ ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ಕೇಂದ್ರ ಸರಕಾರ ರೂಪಿಸಿರುವ ನಿಯಮಾವಳಿಗಳ ಪ್ರತಿಗಳನ್ನು ಸಾಮೂಹಿಕವಾಗಿ ಸುಡುವ ಮೂಲಕ ಪ್ರತಿಭಟಿಸಲು ಸಿಐಟಿಯು ಕರೆ ನೀಡಿದೆ.
ಶನಿವಾರ ಈ ಕುರಿತು ಸಿಐಟಿಟಯು ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮೀ ಪತ್ರಿಕಾ ಹೇಳಿಕೆ ನೀಡಿದ್ದು, ಸರಕಾರವು ಹಠಮಾರಿ ಧೋರಣೆಯೊಂದಿಗೆ, ಕೇಂದ್ರ ಕಾರ್ಮಿಕ ಸಂಘಗಳ ಯಾವುದೇ ಮನವಿಗಳು, ಪ್ರತಿಭಟನೆಗಳು ಮತ್ತು ಮುಷ್ಕರಗಳನ್ನು ಲಕ್ಷಿಸದೆ, ಬಂಡವಾಳಶಾಹಿಗಳ ಬೇಡಿಕೆಗಳನ್ನು ಪೂರೈಸಲು, ನಾಲ್ಕು ಸಂಹಿತೆಗಳನ್ನು ಅನುಷ್ಠಾನಕ್ಕೆ ತಿಂದಿರುವುದು ಅತ್ಯಂತ ದೇಶದ್ರೋಹಿ ಕ್ರಮವಾಗಿದೆ ಎಂದಿದ್ದಾರೆ.
ಹಲವಾರು ದಶಕಗಳಿಂದ ಹೋರಾಟಗಳ ಮೂಲಕ ಗಳಿಸಲಾದ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಹಾಗೂ ಸವಲತ್ತುಗಳನ್ನು ನಾಶಮಾಡುವ ಕ್ರಮ ಇದಾಗಿದೆ. ಬಂಡವಾಳಿಗರು ಮಾಡುತ್ತಿದ್ದ ಎಲ್ಲ ಕಾನೂನು ಉಲ್ಲಂಘನೆಗಳನ್ನು ಕಾನೂನು ಬದ್ಧಗೊಳಿಸುವುದಲ್ಲದೆ, ಖಾಯಂ ಉದ್ಯೋಗದ ಅವಕಾಶಗಳು ಯುವ ಪೀಳಿಗೆಗಳಿಗೆ ಇಲ್ಲದಂತೆ ಮಾಡುವ ಕ್ರಮವಾಗಿದೆ. ಇದು ಕಾರ್ಮಿಕರನ್ನು ನವ ಗುಲಾಮಗಿರಿಗೆ ಒಳಪಡಿಸುವ ಕುತಂತ್ರವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಐಟಿಯು ಸಂಘಟನೆಯು ಈ ಸಂಹಿತೆಗಳನ್ನು ಕಾರ್ಮಿಕರ ಜೀವನ ಮತ್ತು ಜೀವನೋಪಾಯಗಳ ಮೇಲಿನ ನರಮೇಧದ ದಾಳಿಗಳೆಂದು ಪರಿಗಣಿಸುತ್ತದೆ. ಗಾಢವಾಗುತ್ತಿರುವ ನಿರುದ್ಯೋಗದ ಬಿಕ್ಕಟ್ಟು, ಏರುತ್ತಿರುವ ಹಣದುಬ್ಬರ, ಬೆಲೆ ಏರಿಕೆ ಹಾಗು ಜೀವನದ ಕಷ್ಟಗಳನ್ನು ದೇಶದ ಜನರು ಅನುಭವಿಸುತ್ತಿದ್ದಾರೆ. ಕೇಂದ್ರ ಸರಕಾರ ಕೂಡಲೇ ಈ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯಬೇಕು. ರಾಜ್ಯ ಸರಕಾರ ಈ ಸಂಹಿತೆಗಳನ್ನು ರಾಜ್ಯದಲ್ಲಿ ಅನುಷ್ಠಾ ನಕ್ಕೆ ತರಬಾರದು ಎಂದು ವರಲಕ್ಷ್ಮೀ ಆಗ್ರಹಿಸಿದ್ದಾರೆ.