×
Ad

ಬೆಂಗಳೂರಿನಲ್ಲಿ ಎರಡು ಸರಕಾರಿ ಆಸ್ಪತ್ರೆಗಳ ನಿರ್ಮಾಣಕ್ಕೆ 150 ಕೋಟಿ ರೂ.ಗಳಿಗೆ ಅನುಮೋದನೆ

Update: 2026-01-16 22:04 IST

ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು : ನಗರದಲ್ಲಿ ಹೊಸದಾಗಿ ಎರಡು ಸರಕಾರಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಆಸ್ಪತ್ರೆಗಳ ಕಟ್ಟಡ ನಿರ್ಮಾಣಕ್ಕಾಗಿ ಒಟ್ಟು 150 ಕೋಟಿ ರೂ.ಗಳಿಗೆ ಅನುಮೋದನೆ ನೀಡಿ, ರಾಜ್ಯ ಸರಕಾರವು ಶುಕ್ರವಾರದಂದು ಆದೇಶ ಹೊರಡಿಸಿದೆ.

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಬೆಳ್ಳಹಳ್ಳಿ ಗ್ರಾಮದ 5 ಎಕರೆ ಸರಕಾರಿ ಜಮೀನಿನಲ್ಲಿ 125 ಹಾಸಿಗೆಗಳ ಆಸ್ಪತ್ರೆಯನ್ನು ಮತ್ತು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಪಶುಸಂಗೋಪನೆ ಮತ್ತು ಕೃಷಿ ಇಲಾಖೆ ಆವರಣದ ಭೂಪಸಂದ್ರ ಮುಖರಸ್ತೆಗೆ ಹೊಂದಿಕೊಂಡ 4 ಎಕರೆ ಜಾಗದಲ್ಲಿ 125 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಬದಲಿಗೆ ಈ ಎರಡು ಆಸ್ಪತ್ರೆಗಳನ್ನು ನಿರ್ಮಿಸಲು ರಾಜ್ಯ ಸರಕಾರ ಉದ್ದೇಶಿಸಿದೆ. ತಲಾ 75 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಪ್ರತ್ಯೇಕವಾಗಿ ಎರಡು ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಗಳ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದೆ.

ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳುವ ಮುನ್ನ ತಾಂತ್ರಿಕ ಅನುಮೋದನೆಯನ್ನು ಪಡೆಯಬೇಕು. ಕಾಮಗಾರಿಗಳನ್ನು ಕೆಟಿಪಿಸಿ ಕಾಯ್ದೆ ಹಾಗೂ ನಿಯಮಗಳನ್ನು ಅನುಸರಿಸಿ ಟೆಂಡರ್ ಆಹ್ವಾನಿಸಿ ಅನುಷ್ಠಾನಗೊಳಿಸಬೇಕು. ಕಾಮಗಾರಿಗಳ ವಿವರವಾದ ಅಂದಾಜು ಪಟ್ಟಿಗಳಿಗೆ ಆಡಳಿತಾತ್ಮಕ ಅನುಮೋದನೆಗಾಗಿ ಪ್ರತ್ಯೇಕ ಪ್ರಸ್ತಾವಗಳನ್ನು ಸರಕಾರಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರಕಾರ ಆದೇಶದಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News