ಬೆಂಗಳೂರಿನಲ್ಲಿ ಪಟಾಕಿ ಅವಘಡ: 190ಕ್ಕೂ ಅಧಿಕ ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ : PC : freepik
ಬೆಂಗಳೂರು : ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಸಿಡಿಸಿದ ಪಟಾಕಿಯಿಂದ ಬೆಂಗಳೂರಿನಲ್ಲಿಯೇ ಸುಮಾರು 190ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸತತ ಐದು ದಿನಗಳಿಂದ ಪಟಾಕಿ ಸಿಡಿಸುವಾಗ ಗಾಯಗೊಂಡು ಆಸ್ಪತ್ರೆಗೆ ಸೇರುವವರ ಸಂಖ್ಯೆ ಅಧಿಕವಾಗಿದ್ದು, ಕೆಲವರ ಕಣ್ಣಿಗೆ ಗಂಭೀರ ಗಾಯಗೊಂಡು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ನಾರಾಯಣ ನೇತ್ರಾಲಯವೊಂದರಲೇ ಇದುವರೆಗೆ 93 ಜನರ ಕಣ್ಣಿಗೆ ಗಾಯವಾಗಿದೆ. ಇವರಲ್ಲಿ ಬಹಳಷ್ಟು ಮಂದಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದರೆ, ಕೆಲವರ ಕಣ್ಣಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ನಿನ್ನೆ ರಾತ್ರಿಯಿಂದ ನಾರಾಯಣ ನೇತ್ರಾಲಯದಲ್ಲಿ ಹತ್ತು ಮಂದಿ ಚಿಕಿತ್ಸೆ ಪಡೆದಿದ್ದಾರೆ. ಪಟಾಕಿ ಸಿಡಿತದ ಸಂದರ್ಭದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆದವರ ಸಂಖ್ಯೆ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 37ಕ್ಕೆ ಏರಿಕೆಯಾಗಿದೆ. ನಿನ್ನೆ ರಾತ್ರಿಯಿಂದೀಚೆಗೆ ನಾಲ್ಕು ಮಂದಿ ಚಿಕಿತ್ಸೆ ಪಡೆದಿದ್ದಾರೆ. ಹೀಗೆ, ನಗರದ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ 190ಕ್ಕೂ ಅಧಿಕ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.