ಕೆಇಎ : ಡಿ.20ರಿಂದ ಡಿ.22ರವರೆಗೆ ನೇಮಕಾತಿ ಪರೀಕ್ಷೆ
ಬೆಂಗಳೂರು : ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿ.20ರಿಂದ ಡಿ.22ರವರೆಗೆ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ.
ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆ ತಿಳಿಸಿದ್ದು, ವಿವಿಧ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕದ ಒಟ್ಟು 24,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅಷ್ಟೂ ಮಂದಿಗೆ ಮೂರು ದಿನಗಳ ಕಾಲ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಅತ್ಯಂತ ಪಾರದರ್ಶಕ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಜತೆಗೆ ಜಾಮರ್ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆ ಇದ್ದು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.
ಡಿ.20ರಂದು ಬೆಂಗಳೂರಿನ ಏಳು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3,486 ಮಂದಿ ತೆಗೆದುಕೊಂಡಿದ್ದಾರೆ. ಬೆಂಗಳೂರು, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲ್ಬುರ್ಗಿ ಮತ್ತು ಕೊಪ್ಪಳ ಜಿಲ್ಲೆಗಳ 51 ಕೇಂದ್ರಗಳಲ್ಲಿ ಡಿ.21ರಂದು ನಡೆಯುವ ಪರೀಕ್ಷೆಯನ್ನು 21,198 ಮಂದಿ ಹಾಗೂ ಡಿ.22ರಂದು ಬೆಂಗಳೂರಿನಲ್ಲಿ ಮಾತ್ರ ನಡೆಯುವ ಪರೀಕ್ಷೆಯನ್ನು 1,166 ಮಂದಿ ತೆಗೆದುಕೊಂಡಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಎಲ್ಲರಿಗೂ ಕನ್ನಡ ಪರೀಕ್ಷೆ: ಕಲ್ಯಾಣ ಕರ್ನಾಟಕ ಸೇರಿದಂತೆ ಇತರ ಎಲ್ಲರಿಗೂ ಡಿ.28ರಂದು ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.